ಶನಿವಾರ, ಜುಲೈ 2, 2022
25 °C
ಜ್ಯೂಬಿಲಿಯಂಟ್, ಹಿಟಾಚಿ, ಹೀರೊ, ಸೀಮನ್ಸ್ ಮುಖ್ಯಸ್ಥರೊಂದಿಗೆ ಸಿಎಂ ಚರ್ಚೆ

ರಾಜ್ಯದಲ್ಲಿ ಲುಲು ₹2 ಸಾವಿರ ಕೋಟಿ ಹೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಬುದಾಬಿಯ ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ₹ 2 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾಗಿದ್ದು, ಈ ಕುರಿತಂತೆ ಒಪ್ಪಂದಕ್ಕೆ ಗುರುವಾರ ಸಹಿ ಹಾಕಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಲುಲು ಗ್ರೂಪ್‌ ಇಂಟರ್‌ನ್ಯಾಷನಲ್‌ನ ನಿರ್ದೇಶಕ ಎ.ವಿ. ಅನಂತರಾಮನ್‌ ಮತ್ತು ರಾಜ್ಯ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಸಹಿ ಹಾಕಿದರು.

ಲುಲು ಗ್ರೂಪ್ ರಾಜ್ಯದಲ್ಲಿ ನಾಲ್ಕು ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ಆ ಮೂಲಕ, 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಪ್ರಮುಖ ಸಂಸ್ಥೆಗಳ ಮುಖ್ಯಸ್ಥರ ಜೊತೆ ಚರ್ಚೆ: ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮನ್ಸ್ ಸೇರಿದಂತೆ ವಿವಿಧ ಸಂಸ್ಥೆಗಳ ಮುಖ್ಯಸ್ಥರ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಚರ್ಚಿಸಿದರು.

ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್‌ಎಂಸಿಜಿ ವಲಯದಲ್ಲಿ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವಂತೆ ಜ್ಯೂಬಿಲಿಯೆಂಟ್ ಗ್ರೂಪ್‌ನ ಮುಖ್ಯಸ್ಥರಿಗೆ ತಿಳಿಸಿದ ಬೊಮ್ಮಾಯಿ, ಧಾರವಾಡದಲ್ಲಿ ಎಫ್ಎಂಸಿಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಮುಖ ಅಂಶಗಳು
ಜ್ಯೂಬಿಲಿಯಂಟ್ ಫುಡ್ ವರ್ಕ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಆರಂಭಿಸಲು ಹಾಗೂ ದೇವನ
ಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ಜ್ಯೂಬಿಲಿಯಂಟ್ ಬಯೋಸಿಸ್ ನೂತನವಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ತೀರ್ಮಾನಿಸಿದೆ.

* ಇ. ವಿ. ಚಾರ್ಜಿಂಗ್‌ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ಹಿಟಾಚಿ ಎನರ್ಜಿ ಸಂಸ್ಥೆ ಹೇಳಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ.

* ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಗ್ನಾಸ್ಟಿಕ್‌ ಮೇಲೆ ಕೇಂದ್ರೀಕೃತವಾದ ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಯನ್ನು ಬೆಂಗಳೂರಿನಲ್ಲಿ ಕೈಗೆತ್ತಿಕೊಳ್ಳಲು ಸೀಮೆನ್ಸ್ ಸಂಸ್ಥೆ ಉದ್ದೇಶಿಸಿದೆ. ಸ್ಥಳೀಯ ಮಾರುಕಟ್ಟೆಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಇದೇ ಸೆಪ್ಟೆಂಬರ್‌ನಲ್ಲಿ ಶಂಕುಸ್ಥಾಪನೆಗೆ ಉದ್ದೇಶಿಸಿದೆ. ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ಸೀಮನ್ಸ್ ಸಂಸ್ಥೆಯ ಅಧಿಕಾರಿಗಳು ಮಾತುಕತೆ ನಡೆಸಿದರು.

* ನೆಸ್ಲೆ ಕಾರ್ಯಕಾರಿ ಉಪಾಧ್ಯಕ್ಷ ಮಗ್ದಿ ಬತಾಟೋ, ದಸ್ಸಾಲ್ಟ್ ಸಿಸ್ಟಮ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಫ್ಲಾರೆನ್ಸ್ ವರ್ಜೆಲೆನ್ ಜೊತೆ ಮುಖ್ಯಮಂತ್ರಿ ಮಾತುಕತೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು