ಶನಿವಾರ, ಆಗಸ್ಟ್ 13, 2022
24 °C

₹ 2 ಸಾವಿರ ಕೋಟಿ ಹೂಡಿಕೆ: ಟಿಕೆಎಂ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಇನ್ನು ಮುಂದೆ ಉದ್ಯಮ ವಿಸ್ತರಣೆ ಮಾಡುವುದಿಲ್ಲ ಎಂದು ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯನ್ನು ಅಲ್ಲಗಳೆದಿರುವ ಟೊಯೊಟಾ ಕಿರ್ಲೋಸ್ಕರ್ ಮೋಟರ್‌ (ಟಿಕೆಎಂ), ಮುಂಬರುವ ದಿನಗಳಲ್ಲಿ ದೇಶದಲ್ಲಿ ಒಟ್ಟು ₹ 2,000 ಕೋಟಿ ಹೂಡಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದೆ.

ದೇಶದ ಆರ್ಥಿಕ ಬೆಳವಣಿಗೆ ಸಾಮರ್ಥ್ಯದ ಮೇಲೆ ಕಂಪನಿಗೆ ನಂಬಿಕೆ ಇದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವ ಬದ್ಧತೆಯೂ ತನಗೆ ಇದೆ ಎಂದು ಟಿಕೆಎಂ ವ್ಯವಸ್ಥಾಪಕ ನಿರ್ದೇಶಕ ಮಸಕಾಜು ಯೊಶಿಮುರಾ ಹೇಳಿದ್ದಾರೆ. ‘ಭಾರತದ ಮಾರುಕಟ್ಟೆಯಲ್ಲಿ ಹೊಸತಾದ, ಪರಿಸರಕ್ಕೆ ಹಾನಿಕರ ಅಲ್ಲದ ಹಾಗೂ ವಿಶ್ವದರ್ಜೆಯ ತಂತ್ರಜ್ಞಾನವನ್ನು ಪರಿಚಯಿಸುವ ಉದ್ದೇಶ ಕಂಪನಿಗೆ ಇದೆ ಎಂಬುದನ್ನು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ’ ಎಂದೂ ಅವರು ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿನ ಭಾರಿ ತೆರಿಗೆ ಪ್ರಮಾಣದ ಕಾರಣದಿಂದಾಗಿ ಉದ್ಯಮ ವಿಸ್ತರಣೆ ಮಾಡುವುದಿಲ್ಲ ಎಂದು ಟಿಕೆಎಂ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಅವರು ಈಚೆಗೆ ಹೇಳಿದ್ದರು. ಆದರೆ, ಈ ಮಾತನ್ನು ಕಂಪನಿಯ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಅವರು ಅಲ್ಲಗಳೆದಿದ್ದರು.

ಕಿರ್ಲೋಸ್ಕರ್ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಪ್ರಕಾಶ್ ಜಾವಡೇಕರ್, ‘ಟೊಯೊಟಾ ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡುವುದಿಲ್ಲ ಎನ್ನುವುದು ತಪ್ಪು ಮಾಹಿತಿ’ ಎಂದು ಹೇಳಿದ್ದರು. ಟಿಕೆಎಂ ಕಂಪನಿಯು ಬೆಂಗಳೂರು ಸಮೀಪದ ಬಿಡದಿಯಲ್ಲಿ ಎರಡು ತಯಾರಿಕಾ ಘಟಕಗಳನ್ನು ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು