ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ITಕಂಪನಿಗಳು ಕೇರಳಕ್ಕೆ:ರಾಜ್ಯದಲ್ಲಿ ನೀರಿಲ್ಲವೆಂದು ಆಹ್ವಾನಿಸುವುದು ತಪ್ಪು –ಪಾಟೀಲ

Published : 31 ಮಾರ್ಚ್ 2024, 14:54 IST
Last Updated : 31 ಮಾರ್ಚ್ 2024, 14:54 IST
ಫಾಲೋ ಮಾಡಿ
Comments

ಬೆಂಗಳೂರು: ‘ಬರಗಾಲ ಮತ್ತು ಬೇಸಿಗೆಯಲ್ಲಿ ನೀರಿನ ಕೊರತೆ ಸಹಜ. ಇದಕ್ಕೆ ಕೇರಳವೂ ಹೊರತಲ್ಲ. ಆದರೆ, ಅಲ್ಲಿನ ಕೈಗಾರಿಕಾ ಸಚಿವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ಇಲ್ಲಿನ ಐ.ಟಿ ಕಂಪನಿಗಳನ್ನು ತಮ್ಮ ರಾಜ್ಯಕ್ಕೆ ಬರುವಂತೆ ಆಹ್ವಾನಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾಗಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಕೇರಳ ಸಚಿವ ಪಿ. ರಾಜೀವ್ ಅವರು, ಐ.ಟಿ ಕಂಪನಿಗಳಿಗೆ ಆಹ್ವಾನಿಸಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಂದು ರೀತಿಯ ಕುಚೋದ್ಯದ ನಡೆಯಾಗಿದೆ’ ಎಂದು ಹೇಳಿಕೆಯಲ್ಲಿ ಟೀಕಿಸಿದ್ದಾರೆ.

‘ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಪರಸ್ಪರ ಕೊಡುಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಬಾರದು. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಐ.ಟಿ ಕಂಪನಿಗಳು ನೆಲೆಯೂರಿರುವ ಪ್ರದೇಶಗಳಲ್ಲಿ ಗಂಭೀರ ಸ್ವರೂಪದಲ್ಲಿ ನೀರಿನ ಕೊರತೆ ಕಾಣಿಸಿಕೊಂಡಿಲ್ಲ. ಕರ್ನಾಟಕದಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ, ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು ಎಂದಿದ್ದಾರೆ.

ಐ.ಟಿ. ವರಮಾನ ಮತ್ತು ರಫ್ತು ವಹಿವಾಟಿನಲ್ಲಿ ಕರ್ನಾಟಕವು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ನಮ್ಮಲ್ಲಿ ಕೈಗಾರಿಕಾ ಸ್ನೇಹಿ ನೀತಿಗಳಿವೆ. ಇಲ್ಲಿರುವಷ್ಟು ಜಾಗತಿಕ ಮಟ್ಟದ ಕಂಪನಿಗಳು ಬೇರೆಲ್ಲೂ ಇಲ್ಲ ಎಂದು ಹೇಳಿದ್ದಾರೆ.

ಕೇರಳದಲ್ಲಿ 40 ನದಿಗಳಿವೆ ಎಂದು ಸಚಿವರು ಹೇಳಿದ್ದಾರೆ. ಆದರೆ ಅಲ್ಲಿ ಎಷ್ಟು ಅಣೆಕಟ್ಟುಗಳಿವೆ, ಎಷ್ಟರಲ್ಲಿ ನೀರಿನ ಸಂಗ್ರಹವಿದೆ ಎಂಬ ಪ್ರಶ್ನೆಗಳು ಸಹಜವಾಗಿ ಏಳುತ್ತವೆ. ನದಿಗಳಿದ್ದ ಮಾತ್ರಕ್ಕೆ ಕಂಪನಿಗಳನ್ನು ಕಟ್ಟುವುದು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರತ್ಯೇಕ ನೀರು ಪೂರೈಕೆ ವ್ಯವಸ್ಥೆ: ಕರ್ನಾಟಕದ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಸಮೀಪದ ನದಿ ಮೂಲಗಳಿಂದ‌ ನೀರು ಪೂರೈಕೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬೆಂಗಳೂರಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನದಿಯಿಂದ ನೀರು ತರುವ ಸಂಬಂಧ ಪ್ರತ್ಯೇಕ ಯೋಜನೆ ರೂಪಿಸುವ ಬಗ್ಗೆಯೂ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.‌

ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಆಲಮಟ್ಟಿ, ಧಾರವಾಡ, ಕಿತ್ತೂರು, ದುರ್ಗದಕೇರಿ ಕೈಗಾರಿಕಾ ಪ್ರದೇಶಗಳಿಗೆ ಮಲಪ್ರಭಾ ನದಿಯಿಂದ ನೀರು ಪೂರೈಸುವ ಯೋಜನೆಗೆ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT