ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಲ್ಲರೆ ಹಣದುಬ್ಬರ ಇಳಿಕೆ- 19 ತಿಂಗಳ ಕನಿಷ್ಠ ಮಟ್ಟಕ್ಕೆ ತಗ್ಗಿದ ಸಗಟು ಹಣದುಬ್ಬರ

Last Updated 14 ನವೆಂಬರ್ 2022, 15:57 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಕ್ಟೋಬರ್ ತಿಂಗಳಲ್ಲಿ ದೇಶದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇಕಡ 6.77ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಸಗಟು ಹಣದುಬ್ಬರ ಪ್ರಮಾಣವು 19 ತಿಂಗಳ ಕನಿಷ್ಠ ಮಟ್ಟವಾದ ಶೇ 8.39ಕ್ಕೆ ತಗ್ಗಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 7.41ರಷ್ಟು ಇತ್ತು. ಇದು ಶೇ 6.77ಕ್ಕೆ ಇಳಿಕೆ ಆಗಿರುವುದು ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ತುಸು ಸಮಾಧಾನ ತರುವಂತಿದೆ. ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ 6ಕ್ಕಿಂತ ಕಡಿಮೆ ಮಟ್ಟದಲ್ಲಿ ಇರಿಸಲು ಆರ್‌ಬಿಐ ಹೆಣಗುತ್ತಿದೆ. ಅಕ್ಟೋಬರ್‌ನಲ್ಲಿ ದಾಖಲಾಗಿರುವ ಚಿಲ್ಲರೆ ಹಣದುಬ್ಬರ ಪ್ರಮಾಣವು ಮೂರು ತಿಂಗಳ ಕನಿಷ್ಠ.

ಕಚ್ಚಾ ತೈಲ, ಕಬ್ಬಿಣದ ಅದಿರು ಮತ್ತು ಉಕ್ಕಿನ ಬೆಲೆ ಜಾಗತಿಕ ಮಾರುಕಟ್ಟೆಗಳಲ್ಲಿ ತಗ್ಗಿದೆ. ದೇಶಿ ಮಾರುಕಟ್ಟೆಗಳಲ್ಲಿ ವಸ್ತುಗಳ ಪೂರೈಕೆ ಹೆಚ್ಚಿಸಲು ಸರ್ಕಾರ ಕೈಗೊಂಡ ಕ್ರಮಗಳು ಹಣದುಬ್ಬರ ಹೆಚ್ಚಳವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.

‘ಗೋಧಿ ಹಾಗೂ ಅಕ್ಕಿಯ ಪೂರೈಕೆಯನ್ನು ದೇಶಿ ಮಾರುಕಟ್ಟೆಯಲ್ಲಿ ಸ್ಥಿರವಾಗಿ ಇರಿಸಲು ಮತ್ತು ಬೆಲೆಯನ್ನು ನಿಯಂತ್ರಿಸಲು ಕೇಂದ್ರವು ಕ್ರಮ ಕೈಗೊಂಡಿದೆ. ಇದರ ಪರಿಣಾಮವು ಮುಂದಿನ ತಿಂಗಳುಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಅನುಭವಕ್ಕೆ ಬರುವ ನಿರೀಕ್ಷೆ ಇದೆ’ ಎಂದು ಸಚಿವಾಲಯ ತಿಳಿಸಿದೆ.

ಚಿಲ್ಲರೆ ಹಣದುಬ್ಬರವನ್ನು ಶೇ 6ಕ್ಕಿಂತ ಕಡಿಮೆ ಇರಿಸಲೇಬೇಕಿರುವ ಹೊಣೆ ಆರ್‌ಬಿಐ ಮೇಳಿದೆ. ಆದರೆ, ಜನವರಿಯಿಂದ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 6ಕ್ಕಿಂತ ಹೆಚ್ಚಿದೆ. ತನ್ನ ವೈಫಲ್ಯಕ್ಕೆ ಕಾರಣವೇನು ಎಂಬುದನ್ನು ವಿವರಿಸಿ ಆರ್‌ಬಿಐ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

ಕೇಂದ್ರ ವಾಣಿಜ್ಯ ಸಚಿವಾಲಯವು ಸಗಟು ಹಣದುಬ್ಬರಕ್ಕೆ ಸಂಬಂಧಿಸಿದ ಅಂಕಿ–ಅಂಶಗಳನ್ನು ಬಿಡುಗಡೆ ಮಾಡಿದೆ. ಸಗಟು ಹಣದುಬ್ಬರ ಪ್ರಮಾಣವು ಸತತ ಐದು ತಿಂಗಳಿನಿಂದ ಇಳಿಕೆಯ ಹಾದಿಯಲ್ಲಿ ಇದೆ.

ಚಿಲ್ಲರೆ ಹಣದುಬ್ಬರದ ಕುರಿತು ಪ್ರತಿಕ್ರಿಯೆ ನೀಡಿರುವ ಕ್ರಿಸಿಲ್ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞ ಧರ್ಮಕೀರ್ತಿ ಜೋಷಿ, ‘ಮುಂದಿನ ದಿನಗಳಲ್ಲಿ ಚಿಲ್ಲರೆ ಹಣದುಬ್ಬರ ದರವು ತಗ್ಗುವ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

‘ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 7.41ರಷ್ಟು ಇದ್ದಿದ್ದು, ಅಕ್ಟೋಬರ್‌ನಲ್ಲಿ ಶೇ 6.77ಕ್ಕೆ ಇಳಿಕೆಯಾಗಿದೆ. ಇದು ಹಣದುಬ್ಬರ ಪ್ರಮಾಣವು ಗರಿಷ್ಠ ಮಟ್ಟವನ್ನು ತಲುಪಿ ಆಗಿದೆ ಎಂಬುದನ್ನು ಹೇಳುತ್ತಿದೆ. ಮುಂದಿನ ದಿನಗಳಲ್ಲಿ ಚಿಲ್ಲರೆ ಹಣದುಬ್ಬರ ಹಾಗೂ ಸಗಟು ಹಣದುಬ್ಬರ ಇಳಿಕೆ ಆಗಬಹುದು’ ಎಂದು ಸಿಪಿಎಐ ಸಂಸ್ಥೆಯ ಅಧ್ಯಕ್ಷ ನರೀಂದರ್ ವಾಧ್ವಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT