ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ರುವನಾರಾಯಣ ನಾಮಪತ್ರ ಸಲ್ಲಿಕೆ

Last Updated 18 ಜೂನ್ 2018, 13:57 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಆರ್‌. ಧ್ರುವನಾರಾಯಣ ಪುನರಾಯ್ಕೆ ಬಯಸಿ ಶನಿವಾರ ನಾಮಪತ್ರ ಸಲ್ಲಿಸಿದರು.

ಬೆಳಿಗ್ಗೆ ಚಾಮರಾಜೇಶ್ವರ ಸ್ವಾಮಿ, ಕೊಳದ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಿಂದ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಸ್‌. ಮಹದೇವಪ್ರಸಾದ್‌, ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್‌, ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಶಾಸಕರಾದ ಆರ್‌. ನರೇಂದ್ರ, ಸಿ. ಪುಟ್ಟರಂಗಶೆಟ್ಟಿ, ಮುಖಂಡ  ರಾಕೇಶ್‌ ಸಿದ್ದರಾಮಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಾ ಪ್ರಭುಸ್ವಾಮಿ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.

ನಾಮಪತ್ರ: ಧ್ರುವನಾರಾಯಣ ಅವರು ಒಟ್ಟು 4 ನಾಮಪತ್ರ ಸಲ್ಲಿಸಿದ್ದಾರೆ. ಮೊದಲಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್‌. ನರೇಂದ್ರ, ಸಚಿವರಾದ ಎಚ್‌.ಎಸ್‌. ಮಹದೇವಪ್ರಸಾದ್‌ ಹಾಗೂ ಶ್ರೀನಿವಾಸಪ್ರಸಾದ್ ಅವರೊಟ್ಟಿಗೆ ನಾಮಪತ್ರ ಸಲ್ಲಿಸಿದರು.

ಬಳಿಕ ರಾಕೇಶ್‌ ಸಿದ್ದರಾಮಯ್ಯ, ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಶ್ರೀನಿವಾಸಪ್ರಸಾದ್‌, ಎಚ್‌.ಎಸ್‌. ಮಹದೇವಪ್ರಸಾದ್‌ ಅವರೊಟ್ಟಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಸಾಧನೆಯೇ ಶ್ರೀರಕ್ಷೆ: ನಾಮಪತ್ರ ಸಲ್ಲಿಕೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಸ್‌. ಮಹದೇವಪ್ರಸಾದ್‌, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 10 ತಿಂಗಳ ಅವಧಿ ಪೂರ್ಣಗೊಳಿಸಿದೆ. ಜತೆಗೆ, ಕೇಂದ್ರ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳೇ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆಯಾಗಲಿವೆ’ ಎಂದು ಹೇಳಿದರು.

ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್‌ ಮಾತನಾಡಿ, ‘ಸಂಸದ ಆರ್‌. ಧ್ರುವನಾರಾಯಣ ಕ್ಷೇತ್ರದಲ್ಲಿ ಜನಪರ ಕೆಲಸ ಮಾಡಿದ್ದಾರೆ. ಅವರಿಗೆ ಈ ಬಾರಿಯೂ ಕ್ಷೇತ್ರದ ಮತದಾರರ ಬೆಂಬಲ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿ, ವಿರೋಧ ಪಕ್ಷಗಳು ಆಡಳಿತದಲ್ಲಿದ್ದ ವೇಳೆ ದಲಿತರನ್ನು ಉಪ ಮುಖ್ಯಮಂತ್ರಿ ಮಾಡಲಿಲ್ಲ. ಈಗ ದಲಿತರಿಗೆ ಮುಖ್ಯಮಂತ್ರಿ ಪಟ್ಟ ಕೈತಪ್ಪಿತು ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ದಲಿತರಿಗೆ ಸೂಕ್ತ ಸ್ಥಾನಮಾನ ನೀಡಲಾಗಿದೆ. ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಆಶಯದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಪ್ರತಿಕ್ರಿಯಿಸಿದರು.

ಸಂಸದ ಧ್ರುವನಾರಾಯಣ ಮಾತನಾಡಿ, ‘ಕಾಂಗ್ರೆಸ್‌ನಲ್ಲಿ ದಲಿತರಿಗೆ ಹೆಚ್ಚಿನ ಸ್ಥಾನಮಾನ ದಕ್ಕಿದೆ. ಅನಗತ್ಯವಾಗಿ ವಿರೋಧ ಪಕ್ಷದ ಕೆಲವು ಮುಖಂಡರು ದಲಿತರಿಗೆ ಮುಖ್ಯಮಂತ್ರಿ ಹುದ್ದೆ ಸಿಗಲಿಲ್ಲ ಎಂದು ವದಂತಿ ಹಬ್ಬಿಸುತ್ತಿದ್ದಾರೆ. 2008ರ ವಿಧಾನ ಸಭಾ ಚುನಾವಣೆ ವೇಳೆ ಈಗ ಹೇಳಿಕೆ ನೀಡುತ್ತಿರುವ ಮುಖಂಡರು ದಲಿತ ಮುಖಂಡನೊಬ್ಬನನ್ನು ಮುಖ್ಯಮಂತ್ರಿ ಮಾಡಲು ಹಿಂದೇಟು ಹಾಕಿದ್ದು ಏಕೆ? ಎಂದು ಪ್ರಶ್ನಿಸಿದರು.

ವದಂತಿ ಹಬ್ಬಿಸುತ್ತಿರುವ ನಾಯಕರು ಕಾಂಗ್ರೆಸ್‌ನಲ್ಲಿ ಇಲ್ಲ. ಹಿಂದೆಯೂ ಅವರು ನಮ್ಮ ಪಕ್ಷದಲ್ಲಿ ಇರಲಿಲ್ಲ. ನಾನು ಕೂಡ ದಲಿತ ಸಮುದಾಯ ಪ್ರತಿನಿಧಿಸುತ್ತೇನೆ. ಕಳೆದ ಐದು ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಈ ಬಾರಿಯೂ ಕ್ಷೇತ್ರದ ಮತದಾರರು ನನ್ನನ್ನು ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀತಿ ಸಂಹಿತೆ ಉಲ್ಲಂಘನೆ
ಚಾಮರಾಜನಗರ: ನಾಮಪತ್ರ ಸಲ್ಲಿಸುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ 100 ಮೀ. ವ್ಯಾಪ್ತಿ ಪ್ರದೇಶದಲ್ಲಿ ಅಭ್ಯರ್ಥಿ ಸೇರಿದಂತೆ ಐವರು ಮಾತ್ರವೇ ಒಳಪ್ರವೇಶಿಸಬೇಕೆಂಬ ನಿಯಮವಿದೆ.

ಆದರೆ, ಧ್ರುವನಾರಾಯಣ ಅವರು ನಾಮಪತ್ರ ಸಲ್ಲಿಸುತ್ತಿದ್ದ ವೇಳೆ ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು, ಮುಖಂಡರು ನೀತಿ ಸಂಹಿತೆ ಉಲ್ಲಂಘಿಸಿ ಸೀಮಿತ ಪ್ರದೇಶದಲ್ಲಿ ಜಮಾಯಿಸಿದ್ದರು. ಇದರ ಪರಿಣಾಮ ಪೊಲೀಸರು ಮೂಕಪ್ರೇಕ್ಷಕರಾಗುವಂತಾಯಿತು.

ಜಿಲ್ಲಾಡಳಿತ ಭವನದ ದ್ವಾರದಲ್ಲಿಯೇ ಬ್ಯಾರಿಕೇಡ್ ಅಳವಡಿಸಿ ಯಾರೊಬ್ಬರು ಒಳಬರದಂತೆ ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದರು. ಈ ನಡುವೆ ಹಲವು ಮುಖಂಡರು ಮೊದಲೇ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿದ್ದರು. ಸಚಿವರು, ಶಾಸಕರು ಹಾಗೂ ಪಕ್ಷದ ಅಭ್ಯರ್ಥಿ ಒಳಪ್ರವೇಶಿಸಿದಾಗ ಅವರಿಗೆ ಹಸ್ತಲಾಘವ ನೀಡಲು ಮುಗಿಬಿದ್ದರು.

ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಮುಂಭಾಗದಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯಿತು. ಕೆಲವೊತ್ತು ನೂಕುನುಗ್ಗಲು ಉಂಟಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT