ಶನಿವಾರ, ಸೆಪ್ಟೆಂಬರ್ 19, 2020
27 °C
ಸಮೀಕ್ಷೆಯಲ್ಲಿ ಬಯಲಾದ ವಿಚಾರ, ಮತ್ತೆ ಶಾಲೆಗೆ ಕರೆತರಲು ಪ್ರಯತ್ನ

ಶಾಲೆಯಿಂದ ಹೊರಗುಳಿದ 450 ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಚಿಕ್ಕಬಳ್ಳಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ 450 ಮಕ್ಕಳು ಶಾಲೆಯಿಂದ ಹೊರಗೆ ಉಳಿದು, ಕಲಿಕೆಯಿಂದ ವಂಚಿತರಾಗಿದ್ದಾರೆ ಎಂಬ ಅಂಶ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಕಳೆದ ನವೆಂಬರ್ 14 ರಿಂದ ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಸಮೀಕ್ಷೆಗೆ ಚಾಲನೆ ದೊರೆತಿತ್ತು. ಶಿಕ್ಷಣ ಇಲಾಖೆಯು ಆನ್‌ಲೈನ್ ಮೂಲಕ ಎಸ್.ಎ.ಟಿ.ಎಸ್. ತಂತ್ರಾಂಶದಲ್ಲಿ ಇಂತಹ ಮಕ್ಕಳ ವಿವರವನ್ನು ಅಳವಡಿಸಿ, ಜಾಡು ಹಿಡಿಯುವ ಪ್ರಯತ್ನಕ್ಕೆ ಮುಂದಾಗಿತ್ತು.

ಅದಕ್ಕಾಗಿ ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸಿ, ಹೊರಗುಳಿದ ಮಕ್ಕಳನ್ನು ಪತ್ತೆ ಅಭಿಯಾನ ಕೈಗೊಂಡಿತ್ತು. ಮನೆ ಮನೆಗೂ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನೂ ಕೈಗೊಳ್ಳಲಾಗಿತ್ತು.

ನ.17 ರಿಂದ 28ರ ವರೆಗೆ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿ ಸದಸ್ಯರು, ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಶಾಲಾ, ಕಾಲೇಜುಗಳ ಎನ್‌ಎಸ್‌ಎಸ್ ಸ್ವಯಂ ಸೇವಕರ ತಂಡಗಳು ಮನೆ-, ಮನೆಗೆ ಭೇಟಿ ನೀಡಿ ಶಾಲೆಗೆ ಹೋಗುವ ಮಕ್ಕಳ ಮಾಹಿತಿ ಕಲೆ ಹಾಕಿದ್ದರು.

ಇದಕ್ಕೂ ಮುನ್ನ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಬರೀ 70 ವಿದ್ಯಾರ್ಥಿಗಳು ಮಾತ್ರ ಶಾಲೆಯಿಂದ ಹೊರಗೆ ಉಳಿದಿದ್ದಾರೆ ಎಂದು ಹೇಳುತ್ತ ಬಂದಿದ್ದರು. ಇದೀಗ ಸಮೀಕ್ಷೆಯ ಫಲಿತಾಂಶ ಗಾಬರಿ ಹುಟ್ಟಿಸಿದೆ. ಸದ್ಯ ಸಮೀಕ್ಷೆಯಿಂದ ಪತ್ತೆಯಾಗಿರುವ ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳನ್ನು ಶಾಲೆಗೆ ಸೇರಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಶಿಕ್ಷಣ ಇಲಾಖೆ ಕರಸತ್ತು ನಡೆಸುತ್ತಿದೆ.

ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ (272) ಬಾಲಕರೇ ಇದ್ದಾರೆ. 178 ಬಾಲಕಿಯರಿದ್ದಾರೆ. ಇನ್ನು 229 ಪರಿಶಿಷ್ಟ ಜಾತಿ, 64 ಪರಿಶಿಷ್ಟ ವರ್ಗ, ಸಾಮಾನ್ಯ ವರ್ಗದ 80 ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರವರ್ಗ-1 ರಲ್ಲಿ 8, ಮುಸ್ಲಿಂ ಸಮುದಾಯದ 41 ವಿದ್ಯಾರ್ಥಿಗಳು ಅಕ್ಷರದಿಂದ ವಂಚಿತರಾಗಿರುವುದು ಸಮೀಕ್ಷೆಯಲ್ಲಿ ಬಯಲಾಗಿದೆ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ರೆಡ್ಡಿ ಅವರನ್ನು ವಿಚಾರಿಸಿದರೆ, ‘ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಪುನಃ ಶಾಲೆಗೆ ಸೇರಿಸುವ ಪ್ರಯತ್ನ ನಡೆಸಿದ್ದೇವೆ. ವಿದ್ಯಾರ್ಥಿ ನಿಲಯಗಳಲ್ಲಿ ಇರಲು ಒಪ್ಪಿದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೂರಾರ್ಜಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.