46 ಪಾರಂಪರಿಕ ತಾಣಗಳನ್ನು ₹223 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಯಡಿಯೂರಪ್ಪ

ಬೆಂಗಳೂರು: ‘ಕೆಂಪೇಗೌಡರ ಕಾಲದ 46 ಪಾರಂಪರಿಕ ತಾಣಗಳನ್ನು ₹223 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು, ‘ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಪರಿಕಲ್ಪನಾ ಯೋಜನಾ ವರದಿ ಸಿದ್ಧಪಡಿಸಲಾಗಿದೆ’ ಎಂದರು.
‘ಮೂರು ಸರ್ಕ್ಯುಟ್‌ಗಳಲ್ಲಿ ಈ ಸ್ಥಳಗಳನ್ನು ಗುರುತಿಸಲಾಗಿದ್ದು, ₹ 132 ಕೋಟಿ ವೆಚ್ಚದಲ್ಲಿ ಮಾಗಡಿ ಸರ್ಕ್ಯುಟ್, ₹ 47 ಕೋಟಿ ವೆಚ್ಚದಲ್ಲಿ ಬೆಂಗಳೂರು ಸರ್ಕ್ಯುಟ್, ₹ 44 ಕೋಟಿ ವೆಚ್ಚದಲ್ಲಿ ನಂದಿ ಸರ್ಕ್ಯುಟ್ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ’ ಎಂದರು.
‘ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ₹ 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಪ್ರತಿಮೆಯ ಸುತ್ತ ಥೀಮ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ರಾಮನಗರ ಜಿಲ್ಲೆಯ ಕೆಂಪಾಪುರ ಗ್ರಾಮದಲ್ಲಿ ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ₹32 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನು ಕಳೆದುಕೊಳ್ಳುವ 46 ಕುಟುಂಬಗಳಿಗೆ ಪುನರ್ವಸತಿ, ರಸ್ತೆ ಅಭಿವೃದ್ಧಿ ಮತ್ತಿತರ ಮೂಲಸೌಕರ್ಯ ಒದಗಿಸಲು ವ್ಯವಸ್ಥಿತ ಯೋಜನೆ ರೂಪಿಸಬೇಕು’ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಲಹೆ ನೀಡಿದರು.
ಕೆಂಪೇಗೌಡರ ಜೀವನಾಧಾರಿತ ಪುಸ್ತಕ, ಕಿರುಚಿತ್ರ ಸಿದ್ಧಪಡಿಸಲು ಹಾಗೂ ಕೆಂಪೇಗೌಡರ ಆಡಳಿತಾವಧಿಯ ಕೋಟೆಗಳು, ಕೆರೆಗಳು ಮತ್ತು ಪಾರಂಪರಿಕ ತಾಣಗಳನ್ನು ಪ್ರವಾಸೋದ್ಯಮ ಇಲಾಖೆ, ಸಣ್ಣ ನೀರಾವರಿ, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ, ಅರಣ್ಯ, ತೋಟಗಾರಿಕೆ ಮತ್ತಿತರ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸುವಂತೆಯೂ ಅವರು ಸೂಚಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.