ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಾ ನಾಲೆ ಕಾಮಗಾರಿ ತನಿಖೆಗೆ 9 ಸದಸ್ಯರ ತಂಡ

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಘೋಷಣೆ
Last Updated 24 ಜನವರಿ 2020, 14:18 IST
ಅಕ್ಷರ ಗಾತ್ರ

ಶಿವಮೊಗ್ಗ: ತುಂಗಾ ನಾಲೆ ಆಧುನೀಕರಣದಲ್ಲಿ ನಡೆದಿರುವ ಕಳಪೆ ಕಾಮಗಾರಿ ಕುರಿತು ಪರಿಶೀಲಿಸಲು ಮೂವರು ಶಾಸಕರನ್ನು ಒಳಗೊಂಡ 9 ಸದಸ್ಯರ ತಂಡ ರಚಿಸಲಾಯಿತು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಂಡದ ಆಯ್ಕೆ ಘೋಷಿಸಿದರು.

ಶಾಸಕರಾದ ಆರಗ ಜ್ಞಾನೇಂದ್ರ, ಹಾಲಪ್ಪ ಹರತಾಳು, ಕುಮಾರ್ ಬಂಗಾರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಇ.ಕಾಂತೇಶ್, ನರಸಿಂಗ ನಾಯ್ಕ, ಕಾಸರವಳ್ಳಿ ಶ್ರೀನಿವಾಸ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಈ ತಂಡದ ಸದಸ್ಯರು. 15 ದಿನಗಳ ಒಳಗೆ ಸಮಿತಿ ವರದಿ ನೀಡಲಿದೆ.

ವಿಷಯ ಪ್ರಸ್ತಾಪ ಮಾಡಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್, ತುಂಗಾ ನಾಲೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಕಾಮಗಾರಿ ನಡೆದ ನಾಲ್ಕು ತಿಂಗಳಲ್ಲೇ ಹಲವು ಕಡೆ ಕುಸಿದಿವೆ. ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯರ ತಂಡ ರಚಿಸಲಾಗಿತ್ತು. ಕಳಪೆ ಕಮಗಾರಿ ನಡೆದಿರುವ ಕುರಿತು ಸಮಗ್ರ ವರದಿ ಸಲ್ಲಿಸಲಾಗಿತ್ತು. ಆದರೂ, ಮತ್ತೆ ಅದೇ ಗುತ್ತಿಗೆದಾರರಿಗೆ ಕಾಮಗಾರಿ ನೀಡಲಾಗಿದೆ. ಸರ್ಕಾರದ ಹಣ ವ್ಯರ್ಥ ಮಾಡಲಾಗುತ್ತಿದೆ ಎಂದು ದೂರಿದರು.

ಪ್ರಥಮ ಹಂತದ ಕಾಮಗಾರಿ ಕಳಪೆ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ₨ 140 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈಗಾಗಲೇ ಹಿಂದಿನ ಎಂಜಿನಿಯರ್‌ಗಳು ₨ 80 ಕೋಟಿ ಬಿಡುಗಡೆ ಮಾಡಿದ್ದಾರೆ. ಉಳಿದ ಹಣ ನೀಡಬೇಕಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ವಿವರ ನೀಡಿದರು.

ಬಾಕಿ ಇರುವ ಹಣ ಬಿಡುಗಡೆ ಮಾಡಬಾರದು. ಕಳಪೆ ಕಾಮಗಾರಿ ಸಾಬೀತಾದರೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಫೆಬ್ರುವರಿ ಒಳಗೆ ಬಹುಗ್ರಾಮ:

ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆ ಫೆಬ್ರುವರಿ ಅಂತ್ಯದ ಒಳಗೆ ಪೂರ್ಣಗೊಳ್ಳಲಿದೆ. 1,615 ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕಾಮಗಾರಿ ನಡೆಯುತ್ತಿದೆ.ಉಳಿದ 3,258 ಜನವಸತಿ ಪ್ರದೇಶಗಳಿಗೆ ಜಲಧಾರೆ ಯೋಜನೆಮೂಲಕ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಸಚಿವಈಶ್ವರಪ್ಪ ಸೂಚಿಸಿದರು.

ಜಿಲ್ಲೆಯಲ್ಲಿ ಆರಂಭಿಸಲಾಗಿರುವ 89 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 12 ದುರಸ್ತಿಯಲ್ಲಿವೆ.ಅವುಗಳನ್ನುಶೀಘ್ರ ದುರಸ್ತಿಗೊಳಿಸಬೇಕು. ಇದೇ ರೀತಿ ನೀರಿನ ಘಟಕಗಳ ಸ್ಥಿತಿಗತಿ ಕುರಿತುಆಯಾ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಫಲಕ ಅಳವಡಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷ ವೇದಾ ವಿಜಯಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT