ಗುರುವಾರ , ನವೆಂಬರ್ 21, 2019
21 °C

ವಿದ್ಯಾರ್ಥಿ ವೇತನ ಕಡಿತಕ್ಕೆ ಆಕ್ರೋಶ

Published:
Updated:
Prajavani

ವಿಜಯಪುರ: 2019-20ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಡಿತದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ನಗರದ ಗಾಂಧಿ ಚೌಕ್‌ದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಜಿಲ್ಲಾ ಘಟಕದ ಅಧ್ಯಕ್ಷೆ ಶೋಭಾ ಎಸ್.ಎಸ್. ಮಾತನಾಡಿ, ‘ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸುವುದಿಲ್ಲ ಎಂದು ಆದೇಶ ಹೊರಡಿಸಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಈ ಹಿಂದೆ 2 ರಿಂದ 10ನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿ ವೇತನ ದೊರೆಯುತ್ತಿತ್ತು. ಆದರೆ, ನೂತನ ಆದೇಶದಂತೆ ಅನುದಾನದ ಕೊರತೆಯ ನೆಪವೊಡ್ಡಿ, ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳನ್ನು ವಂಚಿಸುವಂತಿದೆ. ಅಂತೆಯೇ, ಮುಂದಿನ ಶೈಕ್ಷಣಿಕ ಸಾಲಿನಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳನ್ನು ಅದರಲ್ಲೂ, ನವೀಕರಣಗೊಂಡ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಲು ತೀರ್ಮಾನಿಸಿದೆ. ಈ ತೀರ್ಮಾನವನ್ನು ಕೈಬಿಟ್ಟು ಈ ಮೊದಲಿನಂತೆಯೇ ಶಿಷ್ಯ ವೇತನ ನೀಡಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಸುರೇಖಾ ಕಡಪಟ್ಟಿ ಮಾತನಾಡಿ, ‘ಜಿಲ್ಲೆಯಲ್ಲಿ ಬರಗಾಲವಿದೆ. ಈಗಿರುವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ವೇತನ ಕಡಿತಗೊಳಿಸುತ್ತಿರುವುದು ಸರಿಯಲ್ಲ. ಕೂಡಲೇ ಆದೇಶವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಎಐಡಿಎಸ್‍ಒ ಜಿಲ್ಲಾ ಸಮಿತಿ ಸದಸ್ಯರಾದ ದೀಪಾ ವಡ್ಡರ, ಗೌರಿ ಹಿರೇಮಠ, ವಿದ್ಯಾರ್ಥಿಗಳಾದ ನವೀನ್, ಅಭಿಷೇಕ, ರಂಜಿತಾ, ಬಂಗಾರಿ ನೇತೃತ್ವ ವಹಿಸಿದ್ದರು.

ಪ್ರತಿಕ್ರಿಯಿಸಿ (+)