ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳ ಲಾಭ ಮನೆ–ಮನೆಗೆ ತಲುಪಿಸಿ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚನೆ

Last Updated 13 ಏಪ್ರಿಲ್ 2022, 15:49 IST
ಅಕ್ಷರ ಗಾತ್ರ

ಬೆಳಗಾವಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಲಾಭವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಬೇಕು’ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.

ತಾಲ್ಲೂಕಿನ ಕಾಕತಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದಲ್ಲಿ ಬುಧವಾರ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಯಕರ್ತರು ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ. ಅದಕ್ಕೆ ತಕ್ಕಂತೆ ಈಗಿನಿಂದಲೇ ಕಾರ್ಯನಿರ್ವಹಿಸಬೇಕು. ಸರ್ಕಾರದ ಸಾಧನೆಗಳನ್ನು ತಿಳಿಸಿ ಜನರ ಮನ ಗೆಲ್ಲಬೇಕು’ ಎಂದರು.

ಶಾಸಕ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ‘ಕಾಂಗ್ರೆಸ್ ಹಣ ಬಲ, ತೋಳ್ಬಲ, ಅಧಿಕಾರ ಬಲದಿಂದ ಚುನಾವಣೆ ಗೆಲ್ಲುತ್ತಿತ್ತು. ಈಗ ಜನರಲ್ಲಿ ಜಾಗೃತಿ ಬಂದಿದೆ. ಬಿಜೆಪಿಯ ಜನಪರ ಆಡಳಿತಕ್ಕೆ ಬೆಂಬಲ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕೊಟ್ಟಿರುವ ಯೋಜನೆಗಳನ್ನು ಜನರಿಗೆ ತಿಳಿಸಬೇಕು’ ಎಂದು ಹೇಳಿದರು.

ಜವಾಬ್ದಾರಿ ನಿರ್ವಹಿಸಿ:

‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಯನ್ನೆ ಸೋಲಿಸಿದ ಇತಿಹಾಸ ಕಾಂಗ್ರೆಸ್‌ನದಾಗಿದೆ. ಇದೆಲ್ಲದರ ಪರಿಣಾಮ ದೇಶದಲ್ಲಿ ಕಾಂಗ್ರೆಸ್‌ಗೆ ವಿಳಾಸ ಇಲ್ಲದಂತಾಗಿದೆ. ಮುಂಬರುವ ದಿನಗಳಲ್ಲಿ ಇಡೀ ದೇಶ ಕಾಂಗ್ರೆಸ್ ಮುಕ್ತವಾಗಲಿದೆ. ರಾಜ್ಯದಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ‘ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದ್ದಾರೆ. ಕೊರೊನಾ ಮಧ್ಯೆಯೂ ಉತ್ತಮ ಆಡಳಿತಕ್ಕೆ ತೊಡಕಾಗದಂತೆ ನೋಡಿಕೊಂಡಿದ್ದಾರೆ’ ಎಂದರು.

ಸಂಸದೆ ಮಂಗಲಾ ಅಂಗಡಿ ಮಾತನಾಡಿದರು. ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಮಹಾಂತೇಶ ದೊಡ್ಡಗೌಡರ, ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ನಾಯಕರು ಸರಣಿ ಸಭೆಗಳನ್ನು, ಈ ಭಾಗದಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು. ವೈಯಕ್ತಿಕ ಪ್ರತಿಷ್ಠೆಗಳನ್ನು, ಭಿನ್ನಮತವನ್ನು ಬದಿಗಿಟ್ಟು ಪಕ್ಷವನ್ನು ಬಲಪಡಿಸಲು ಕೆಲಸ ಮಾಡಬೇಕು ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT