ಬಾಗಲಕೋಟೆ: ಆರ್ಥಿಕ, ದೈಹಿಕ ಹಾಗೂ ಸಾಮಾಜಿಕವಾಗಿ ಉತ್ತಮ ಸ್ಥಾನದಲ್ಲಿರುವ ಮನುಷ್ಯ ವ್ಯಸನಿಯಾದರೆ ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತಾನೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಮಾನಸಿಕ ದಿನ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಹೇಳಿದರು.
ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ನಗರಸಭೆ ಸಹಯೋಗದಲ್ಲಿ ನಗರಸಭೆ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಕಾನೂನು ಅರಿವು ಹಾಗೂ ಎನ್.ಸಿ.ಡಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಸನಗಳು ಮೊದಲು ಮೊದಲು ದೈಹಿಕವಾಗಿ ತೊಂದರೆ ಕೊಡದಿದ್ದರೂ, ಮಾನಸಿಕವಾಗಿ ಹೆಚ್ಚು ಪರಿಣಾಮ ಬೀರುತ್ತವೆ. ಇದರಿಂದ ಮನುಷ್ಯ ಅಶಕ್ತನಾಗಿ ರೋಗಗ್ರಸ್ಥನಾಗುತ್ತಾನೆ. ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಬೇಕಾದರೆ, ಮನೆ, ಸಮಾಜ, ಸಂಬಂಧ, ಸ್ನೇಹ ಕಾರ್ಯ ನಿರ್ವಹಿಸುವ ಸ್ಥಳಗಳಲ್ಲಿ ನಮ್ಮ ವ್ಯಕ್ತಿತ್ವಕ್ಕೆ ಸಿಗುವ ಗೌರವದಿಂದ ಮೇಲೆ ನಮ್ಮತನ ಗೊತ್ತಾಗುತ್ತದೆ ಎಂದರು.
ಕೆಲಸದ ಒತ್ತಡದಿಂದ ಪೌರಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗತ್ತಿರುವುದು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದರಿಂದ ಪೌರ ಕಾರ್ಮಿಕರ ಮೇಲೆ ಅವಲಂಬಿತರಾದ ಕುಟುಂಬ ಸಂಕಷ್ಟಕ್ಕೆ ಒಳಗಾಗುತ್ತಿದೆ. ಕುಟುಂಬದ ಒಬ್ಬ ವ್ಯಸನಿಯಾದರೆ ತಮ್ಮ ಅವಲಂಬಿತರೆಲ್ಲರೂ ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂಬುದನ್ನು ಕಾರ್ಮಿಕರು ಅರಿಯಬೇಕು ಎಂದು ಹೇಳಿದರು.
ನಗರಸಭೆ ಪೌರಾಯುಕ್ತ ವಾಸಣ್ಣ ಆರ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ದಯಾನಂದ ಕರೆನ್ನವರ, ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ಡಾ.ಎಸ್.ಸಿ.ಪಾಟೀಲ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಆಸ್ಪತ್ರೆಯ ಮಾನಸಿಕ ಆರೋಗ್ಯ ವೈದ್ಯ ಡಾ.ರವಿ ಸಿ.ಎ, ವಕೀಲರ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಹಾವರಗಿ, ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಂಯೋಜಕ ಡಾ.ಶಶಿಕಾಂತ ಕುಮಠಳ್ಳಿ ಉಪಸ್ಥಿತರಿದ್ದರು.
ವ್ಯಸನದಿಂದ ಕುಟುಂಬದ ನೆಮ್ಮದಿಯೂ ಹಾಳು ದುಶ್ಚಟಗಳಿಂದ ದೂರವಿರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.