ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ಪ್ರವಾಹ: ನಿಗಾ, ಮುನ್ನೆಚ್ಚರಿಕೆಗೆ ಡಿಸಿ ಸೂಚನೆ

ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ, ಗೈರಾದ ಅಧಿಕಾರಿಗಳಿಗೆ ನೋಟಿಸ್
Published 13 ಜೂನ್ 2024, 13:59 IST
Last Updated 13 ಜೂನ್ 2024, 13:59 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಬಗ್ಗೆ ನಿರಂತರ ನಿಗಾ ವಹಿಸುವುದರ ಜೊತೆಗೆ ಎಲ್ಲ ರೀತಿಯ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಇಲಾಖೆ ಪ್ರವಾಹ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ತಾಲ್ಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಪ್ರವಾಹ ಬಾಧಿತ ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದರು. 

ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಶಿಥಿಲಾವಸ್ಥೆಯಲ್ಲಿರುವ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳನ್ನು ಗುರುತಿಸಬೇಕು. ಜಿಲ್ಲೆಯಲ್ಲಿ ಸ್ವಂತ ಹಾಗೂ ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೆ ಶೆಡ್‍ಗಳಲ್ಲಿ ಅಂಗನವಾಡಿ ನಡೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೋಟ್‍ಗಳನ್ನು ಸುಸ್ಥಿತಿಯಲ್ಲಿಡ್ಡಬೇಕು. ನಾವಿಕರ ಮಾಹಿತಿ, ರಕ್ಷಣಾ ಸಾಮಗ್ರಿಗಳ ವಿವರ, ತರಬೇತಿ ಪಡೆದ ನುರಿತ ಸಿಬ್ಬಂದಿ ಮಾಹಿತಿ ಹೊಂದಿರಬೇಕು. ಲೋಕೋಪಯೋಗಿ ಇಲಾಖೆಯವರು ರಸ್ತೆಯ ಮೇಲೆ ನೀರು ನಿಲ್ಲದ ಹಾಗೆ ಕ್ರಮ ವಹಿಸಬೇಕು ಎಂದರು.

ಪ್ರತಿ ತಾಲ್ಲೂಕಿನಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮನೆ ಹಾನಿ, ಸಿಡಿಲು ಬಡಿದು ಆಗಿರುವ ಸಾವುಗಳ ಮಾಹಿತಿ ಪಡೆದು, ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಅವ್ಯವಸ್ಥೆಯಾದರೆ ಅಧಿಕಾರಿಗಳೇ ಜವಾಬ್ದಾರರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ಕೊಳವೆಬಾವಿಗಳ ಅಂತರ್ಜಲ ಮಟ್ಟ ಹೆಚ್ಚಳವಾದ ಬಗ್ಗೆ ಪರೀಕ್ಷೆ ಮಾಡಬೇಕು. ಅಂತರ್ಜಲ ಮಟ್ಟ ಹೆಚ್ಚಾಗಿದ್ದರೆ, ಖಾಸಗಿ ಕೊಳವೆಬಾವಿಗಳಿಂದ ಪಡೆಯುತ್ತಿರುವ ನೀರನ್ನು ಸ್ಥಗಿತಗೊಳಿಸಿ, ಸರ್ಕಾರಿ ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠ ಅಮರನಾಥ ರೆಡ್ಡಿ ಮಾತನಾಡಿ, ಪ್ರವಾಹ ಉಂಟಾಗುವ ಸಂದರ್ಭದಲ್ಲಿ ಸಾವು ಸಂಭವಿಸದಂತೆ ಎಲ್ಲ ರೀತಿಯ ಮುಂಜಾಗೃತಾ ಕ್ರಮ ವಹಿಸಬೇಕು. ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಲಿದ್ದಾರೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ರಾಜಶೇಖರ ಕಡಿವಾಲರ, ನಗರಸಭೆ ಪೌರಾಯುಕ್ತ ವಾಸಣ್ಣ ಆರ್. ಇದ್ದರು.

ಸಹಾಯವಾಣಿ ಸಂಪರ್ಕಿಸಿ

ಮಳೆ ನದಿಗಳಿಂದ ಉಂಟಾಗುವ ವಿಪತ್ತಿನಿಂದ ಎದುರಾಗುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ (1077) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (112) ಹೆಸ್ಕಾಂ (1912) ಅಗ್ನಿಶಾಮಕ ದಳ (101) ಅರಣ್ಯ ಇಲಾಖೆ (1926) ಸಾರ್ವಜನಿಕರು ಕರೆ ಮಾಡಬಹುದಾಗಿದೆ.     

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT