ಬುಧವಾರ, ನವೆಂಬರ್ 20, 2019
27 °C

ಗದ್ದನಕೇರಿ ಕ್ರಾಸ್‌ನಲ್ಲಿ ಬಸ್ ಬೇ ನಿರ್ಮಿಸಿ: ಡಿಸಿ

Published:
Updated:
Prajavani

ಬಾಗಲಕೋಟೆ: ಇಲ್ಲಿನ ಗದ್ದನಕೇರಿ ಕ್ರಾಸ್‌ನಲ್ಲಿ ನಾಲ್ಕು ಕಡೆಗಳಲ್ಲೂ ಶೀಘ್ರವೇ ಬಸ್ ಬೇ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದವರು ಬಸ್ ಬೇ ನಿರ್ಮಿಸಲು ಒಪ್ಪಿಗೆ ನೀಡಿದ್ದು, ಅದರ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದರು.

ಹುಬ್ಬಳ್ಳಿ ಮತ್ತು ವಿಜಯಪುರ ಮಾರ್ಗದ ಎರಡೂ ಕಡೆಗಳಲ್ಲಿ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಹಾಗೂ ಬೆಳಗಾವಿ ಮತ್ತು ಬಾಗಲಕೋಟೆ ಮಾರ್ಗದ ಎರಡು ಕಡೆಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಶೀಘ್ರ ಬಸ್ ಬೇ ನಿರ್ಮಿಸಲು ಸೂಚಿಸಿದರು.

‘ಮುಧೋಳ ಮತ್ತು ಲೋಕಾಪುರದಲ್ಲಿ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಒನ್‌ ವೇ ವ್ಯವಸ್ಥೆ ಮಾಡುವ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಲಹೆ ಪಡೆದು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ’ ಸೂಚಿಸಿದರು.

‘ಸರಕು ಸಾಗಾಣಿಕೆ ಹಾಗೂ ಕಟ್ಟಡ ಸಾಮಗ್ರಿ ಸಾಗಿಸುವ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದು, ಟಂ ಟಂಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಆ ಬಗ್ಗೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ತಾಲ್ಲೂಕಿನ ಟಂ ಟಂ ಅಸೋಸಿಯೇಶನ್‌ ಪ್ರತಿನಿಧಿಗಳ ಕರೆಸಿ ಸಭೆಗಳನ್ನು ನಡೆಸಿ ಸೂಕ್ತ ನಿರ್ದೇಶನ ನೀಡುವಂತೆ ಪ್ರಾದೇಶಿ ಸಾರಿಗೆ ಅಧಿಕಾರಿಗೆ’ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾತನಾಡಿ, ‘ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳುವ ಕುರಿತು ಶಿಕ್ಷಣ ಸಂಸ್ಥೆಗಳೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ’ ಎಂದು ತಿಳಿಸಿದರು. 

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ, ಜಿಲ್ಲಾ ಉಪ ಅರಣ್ಯಸಂರಕ್ಷಣಾಧಿಕಾರಿ ದೇವರಾಜ, ವಿಭಾಗೀಯ ಸಾರಿಗೆ ಅಧಿಕಾರಿ ಪಡಿಯಪ್ಪ ಮೇತ್ರಿ, ನಗರಸಭೆ ಆಯುಕ್ತ ಗಣಪತಿ ಪಾಟೀಲ ಇದ್ದರು. 

ಪ್ರತಿಕ್ರಿಯಿಸಿ (+)