ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಗಡುವು ಮುಗಿದಿದೆ, ಡಿ.23ರಿಂದ ಪಾದಯಾತ್ರೆ: ಜಯಮೃತ್ಯುಂಜಯ ಶ್ರೀ

Last Updated 29 ನವೆಂಬರ್ 2020, 6:22 IST
ಅಕ್ಷರ ಗಾತ್ರ

ಬಾಗಲಕೋಟೆ: ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವಂತೆ ಹಾಗೂ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ನೀಡಿದ್ದ ಗಡುವು ನವೆಂಬರ್ 28ಕ್ಕೆ ಮುಗಿದಿದೆ. ಹೀಗಾಗಿ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್ 23 ರಂದು ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಲಿಂಗಾಯತ ಸಮಾಜದ 10 ಲಕ್ಷ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಲಿಂಗಾಯತ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಮೀಸಲಾತಿ ಪಡೆಯಲು ಮುಂದಿನ ಹಂತದ ಹೋರಾಟದ ಬಗ್ಗೆ ಬಾಗಲಕೋಟೆಯಲ್ಲಿ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಘಟಕದ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಯಡಿಯೂರಪ್ಪ ವಚನಭ್ರಷ್ಟರು ಅಲ್ಲ. ಕೊಟ್ಟ ಮಾತು ಉಳಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಲಿಂಗಾಯತ ಸಮುದಾಯದ 104 ಒಳಪಂಗಡಗಳನ್ನು ಕೇಂದ್ರದ ಇತರೆ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕು ಎಂದು ಈ ಹಿಂದೆ ಚಿನ್ನಪ್ಪ ರೆಡ್ಡಿ ಆಯೋಗ ವರದಿ ನೀಡಿದೆ. ಹೀಗಾಗಿ ಮತ್ತೆ ಹೊಸದಾಗಿ ಹಿಂದುಳಿದ ವರ್ಗದ ಆಯೋಗದ ಶಿಫಾರಸು ಪಡೆಯುವ ಅಗತ್ಯವಿಲ್ಲ.ತಾಂತ್ರಿಕ ಕಾರಣಗಳನ್ನು ಮುಂದೊಡ್ಡುತ್ತಿರುವುದು ಕೇವಲ ನೆಪ ಮಾತ್ರ ಎಂದು ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರಿಂದ ಒಪ್ಪಿಗೆ ಪಡೆದು ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸಿದರೆ ಆ ಸ್ಥಾನವನ್ನು ಪಂಚಮಸಾಲಿ ಸಮಾಜಕ್ಕೆ ಕೊಡಲಿ ಎಂದು ಸ್ವಾಮೀಜಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹತ್ತಿಕ್ಕುವ ಕೆಲಸ ಸಲ್ಲ: ನರೇಂದ್ರ ಮೋದಿ ಪ್ರಧಾನಿಯಾಗಲು, ಅಮಿತ್ ಶಾ ಗೃಹ ಸಚಿವರಾಗಲು ರಾಜ್ಯದಲ್ಲಿ ಲಿಂಗಾಯತ ಸಮಾಜದ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಲಿಂಗಾಯತರನ್ನು ಹತ್ತಿಕ್ಕುವ ಕೆಲಸ ಮಾಡಿದರೆ ಸಮಾಜ ಸುಮ್ಮನಿರುವುದಿಲ್ಲ ಎಂದು ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ , ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಎಚ್ಚರಿಸಿದರು.

ಯಡಿಯೂರಪ್ಪ ಅವರಿಗೆ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸಿದರೆ, ಅವರನ್ನು ಬದಲಾಯಿಸುವ ಕೆಲಸ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು.

ವಿಧಾನಸೌಧಕ್ಕೆ ಮುತ್ತಿಗೆ: ಲಿಂಗಾಯತ ಸಮಾಜವನ್ನು ಓಬಿಸಿ ಪಟ್ಟಿಗೆ ಸೇರಿಸಲು ಆಗ್ರಹಿಸಿ ಪಂಚಮಸಾಲಿ ಶ್ರೀಗಳ ಪಾದಯಾತ್ರೆ ಬೆಂಗಳೂರು ತಲುಪುತ್ತಿದ್ದಂತೆಯೇ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT