ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ

ಯುಕೆಪಿ ವಿಶೇಷ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ ಸೂಚನೆ
Published 14 ಮಾರ್ಚ್ 2024, 14:43 IST
Last Updated 14 ಮಾರ್ಚ್ 2024, 14:43 IST
ಅಕ್ಷರ ಗಾತ್ರ

ಬೀಳಗಿ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೈಗೊಂಡ ಕಾಮಗಾರಿಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗೆ ಸರ್ಕಾರದಿಂದ ಮಂಜೂರಾದ ಹಣ ವಿನಿಯೋಗವಾಗದೆ ಮರಳಿ ಹೋಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಏನಾದರೂ ವ್ಯತ್ಯಾಸವಾದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಯುಕೆಪಿ ವಿಶೇಷ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೇಸಿಗೆ ಸಮಯದಲ್ಲಿ ಜನ,ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ತಾಲ್ಲೂಕು ಕೇಂದ್ರದಲ್ಲಿ ಮೂರು ಕಡೆಗೆ ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತವಾಗಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಪ್ರಭಾರಿ ಅಧಿಕಾರಿ ಆರ್.ಕೆ. ಡಂಬಳಗೆ ಸೂಚನೆ ನೀಡಿದರು.

ಹೊಸ ಕಾಮಗಾರಿಗಳು ಮಂಜೂರಾಗಿದ್ದು, ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೆ ಮುಂಚೆ ಜನಪ್ರತಿನಿಧಿಗಳಿಂದ ಕಾಮಗಾರಿಗೆ ಚಾಲನೆ ಕೊಡಿಸಬೇಕು. ಇಲ್ಲದಿದ್ದರೆ ಮಂಜೂರಾದ ಕಾಮಗಾರಿಗಳನ್ನು ನೀತಿ ಸಂಹಿತಿ ಮುಗಿಯುವವರೆಗೆ ಆರಂಭಿಸಲು ಆಗಲ್ಲ. ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಜಮಖಂಡಿ- ಗಲಗಲಿ ವಾಯಾ ಮುಂಡಗನೂರ ರಾಜ್ಯ ಹೆದ್ದಾರಿ ಹಾಗೂ ಗಲಗಲಿ ಮಾರ್ಗವಾಗಿ ಕೈಗೊಂಡ ಯರಗಟ್ಟಿ- ಬಬಲೇಶ್ವರ ರಾಜ್ಯ ಹೆದ್ದಾರಿ ರಸ್ತೆಗಳ ಕಾಮಗಾರಿಯನ್ನು ಏಪ್ರಿಲ್ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಎಇಇ ಆಯ್ ಎಸ್ ಹೊಸೂರ ಅವರಿಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಚ್.ಎಂ.ಪಾಟೀಲ, ಅರಣ್ಯ ಅಧಿಕಾರಿ ಎಚ್ ಬಿ ಡೋಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪುರ, ಜಿಎಲ್‌ಬಿಸಿ ಎಇಇ ರಾಜಶೇಖರ ರಾಥೋಡ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT