ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶದಿಂದ ಬಂದವರ ಮೇಲೆ ನಿಗಾ

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಸಭೆ
Last Updated 13 ಮಾರ್ಚ್ 2020, 14:34 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಗೆ ವಿದೇಶದಿಂದ ಬರುವ ಪ್ರತಿಯೊಬ್ಬರನ್ನುಪ್ರತ್ಯೇಕ ಕೊಠಡಿಯಲ್ಲಿ ಕಡ್ಡಾಯವಾಗಿ 14 ದಿನಗಳವರೆಗೆ ಇರಿಸಿ ನಿಗಾ ವಹಿಸಲು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರ್ಗಿಯಲ್ಲಿ 76 ವರ್ಷದ ವೃದ್ಧರೊಬ್ಬರು ಕೋವಿಡ್–19 ಸೋಂಕಿಗೆ ಬಲಿಯಾಗಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದ ಹಿನ್ನೆಲೆಯಲ್ಲಿ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್–19 ಸೋಂಕು ಕಂಡುಬಂದಿಲ್ಲ. ಆದರೂ ಜಿಲ್ಲೆಯ ತಹಶೀಲ್ದಾರರು ವಿದೇಶಗಳಿಗೆ ಹೋಗಿ ಮರಳಿ ಬರುವವರ ಮಾಹಿತಿ ಪ್ರತಿದಿನ ಕಲೆಹಾಕಿ ತಾಲ್ಲೂಕು ವೈದ್ಯಾಧಿಕಾರಿಗೆ ನೀಡಬೇಕು. ಅಲ್ಲದೇ ಗ್ರಾಮ ಲೆಕ್ಕಾಧಿಕಾರಿಗಳಿಂದಲೂ ಈ ಬಗ್ಗೆ ಮಾಹಿತಿ ಕಲೆ ಹಾಕಬೇಕು’ ಎಂದರು.

ನಿಗಾ ಕೊಠಡಿಯಲ್ಲಿರಿಸಿದ ವ್ಯಕ್ತಿಯಲ್ಲಿ ಕೋವಿಡ್–19 ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಮಾಹಿತಿ ನೀಡಿ ತಪಾಸಣೆಗೆ ಒಳಪಡಿಸುವ ಕೆಲಸವಾಗಬೇಕು. ಅಂತಹ ಲಕ್ಷಣಗಳು ಕಂಡ ಬಂದ ವ್ಯಕ್ತಿಯ ರಕ್ತ ಮತ್ತು ಗಂಟಲು ಮಾದರಿ ಪರೀಕ್ಷೆಗೆ ಒಳಪಡಿಸಿ ಸೋಂಕು ತಗುಲಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಸಾರ್ವಜನಿಕರು ಸಹ ವಿದೇಶ ಪ್ರವಾಸ ಮುಗಿಸಿ ಜಿಲ್ಲೆಗೆ ಬಂದ ವ್ಯಕ್ತಿಗಳ ಮಾಹಿತಿಯನ್ನು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ನೀಡಿ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಕೋರಿದರು.

ಐತಿಹಾಸಿಕ ತಾಣಗಳಾದ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಗೆ ವಿದೇಶದಿಂದ ಹೆಚ್ಚಾಗಿ ಪ್ರವಾಸಿಗರು ಬರುತ್ತಿದ್ದು, ಅವರ ಬಗ್ಗೆ ನಿಗಾವಹಿಸಿ ಮಾಹಿತಿ ಪಡೆದುಕೊಳ್ಳಬೇಕು. ಹೋಟೆಲ್, ಹೋಮ್‌ ಸ್ಟೇಗಳಲ್ಲಿ ಬರುವ ವಿದೇಶಿ ಪ್ರವಾಸಿಗಳ ಬಗ್ಗೆ ಮಾಹಿತಿ ಕಲೆಹಾಕಿ ತಪಾಸಣೆಗೆ ಒಳಪಡಿಸಬೇಕು. ಪ್ರವಾಸಿ ಸ್ಥಳಗಳಲ್ಲಿ ನಿಗಾವಹಿಸಲು ಸಿಬ್ಬಂದಿ ನಿಯೋಜಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಜಿಲ್ಲೆಯ ಜನತೆ ಕೋವಿಡ್–19 ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಹರಡದಂತೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ್ ಕಂಠಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT