ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊರೊನಾ ಸೋಂಕು: ಅನಗತ್ಯ ಭಯಬೇಡ’

ಸಾಮಾಜಿಕ ಅಂತರ ಕಾಯ್ದುಕೊಂಡು ಸೋಂಕಿನಿಂದ ದೂರ ಉಳಿಯಿರಿ: ಜಿಲ್ಲೆ ಜನರಿಗೆ ಡಿಸಿಎಂ ಕಿವಿಮಾತು
Last Updated 28 ಮಾರ್ಚ್ 2020, 10:57 IST
ಅಕ್ಷರ ಗಾತ್ರ

ಬಾಗಲಕೋಟೆ: 'ಕೊರೊನಾ ಸೋಂಕು ಬಾಧಿತರಲ್ಲಿ ಶೇ 99.9ರಷ್ಟು ಜನರು ಸಾಯುವುದಿಲ್ಲ. ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗುತ್ತಾರೆ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ' ಎಂದು ಜಿಲ್ಲೆಯ ಜನರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಧೈರ್ಯ ತುಂಬಿದರು.

ನಗರದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ’ಕೊರೊನಾ ಸೋಂಕು ಹರಡದಂತೆ ತಡೆಯಲು ಕೈಗೊಂಡ ಮುನ್ನೆಚ್ಚರಿಕೆ ಕ್ರಮ ಹಾಗೂ ಚಿಕಿತ್ಸೆಗೆ ನಡೆಸಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಮಾತ್ರ ಕೊರೊನಾ ಸೋಂಕು ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗ. ಹೀಗಾಗಿ ಮನೆಯಿಂದ ಹೊರಗೆ ಬಾರದೇ ಜಿಲ್ಲಾಡಳಿತ ಸೂಚನೆಗಳನ್ನು ಪಾಲಿಸುವಂತೆ ಜನರಿಗೆ ಮನವಿ ಮಾಡಿದರು.

ಸುದೈವದಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಇದೇ ವಾತಾವರಣ ಮುಂದುವರೆಯಲಿ ಎಂದು ಆಶಿಸಿದ ಅವರು, ನಗರದಲ್ಲಿ ಮಾತ್ರವಲ್ಲ ಗ್ರಾಮೀಣ ಪ್ರದೇಶದಲ್ಲಿನ ಆಶಾ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೇಂದ್ರ ಸರ್ಕಾರ ಜೀವ ವಿಮೆಗೆ ಅವಕಾಶ ಮಾಡಿಕೊಟ್ಟಿದೆ. ಎಲ್ಲರೂ ಅದರ ವ್ಯಾಪ್ತಿಗೆ ಒಳಪಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಯಾವುದೇ ತೊಂದರೆ ಆಗದಂತೆ ಅವರು ಊರುಗಳಿಗೆ ತೆರಳಿ ಬೀಜ–ಗೊಬ್ಬರ ಪೂರೈಸುವಂತೆ ಸೊಸೈಟಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಕೆ.ರಾಜೇಂದ್ರ, ಸಿಇಒ ಗಂಗೂಬಾಯಿ ಮಾನಕರ, ಎಸ್ಪಿ ಲೋಕೇಶ ಜಗಲಾಸರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಪ್ರಕಾಶ ಬಿರಾದಾರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT