ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ಡೆಂಗಿ ನಿಯಂತ್ರಣಕ್ಕೆ ಮುಂದಾಗಿ: ಡಿಸಿ

ಬಾಗಲಕೋಟೆ ನಗರದಲ್ಲಿ 19, ಜಿಲ್ಲೆಯಲ್ಲಿ 53 ಡೆಂಗಿ ಪ್ರಕರಣ
Published 11 ಜುಲೈ 2024, 14:33 IST
Last Updated 11 ಜುಲೈ 2024, 14:33 IST
ಅಕ್ಷರ ಗಾತ್ರ

ಬಾಗಲಕೋಟೆ: ಡೆಂಗಿ ಪ್ರಕರಣಗಳ ನಿಯಂತ್ರಣಕ್ಕೆ ಆದ್ಯತೆ ನೀಡಿ, ಜಿಲ್ಲೆಯಲ್ಲಿ ಡೆಂಗಿಯಿಂದ ಒಂದೇ ಒಂದು ಸಾವು ಸಂಭವಿಸದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ಸರ್ವೇಕ್ಷಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಜಿಲ್ಲೆಯಲ್ಲೂ ‌‌‌ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲಾ ಆರೋಗ್ಯಾಧಿಕಾರಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ಇಲಾಖೆಗಳಿಂದ ಅಗತ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿ ಸಹಕಾರ ಪಡೆದುಕೊಂಡು ಡೆಂಗಿ ನಿಯಂತ್ರಣ ತರಬೇಕು ಎಂದರು.

ಜನವರಿಯಿಂದ ಇಲ್ಲಿಯವರೆಗೆ ಬಾಗಲಕೋಟೆ ನಗರದಲ್ಲೇ 19 ಪ್ರಕರಣಗಳು ಖಚಿತಪಟ್ಟಿದ್ದರೆ, ಜಿಲ್ಲೆಯಲ್ಲಿ 53 ಪ್ರಕರಣಗಳಾಗಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿರಿಸಬೇಕು. ಔಷಧ ದಾಸ್ತಾನು ಕೊರತೆಯಾಗಬಾರದು ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ತೋರುವ ರೀತಿಯಲ್ಲಿ ಪ್ರದರ್ಶಿಸಬೇಕು ಎಂದು ಈಗಾಗಲೇ ಸೂಚಿಸಲಾಗಿದ್ದು ಅದನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಅನುಷ್ಠಾನಕ್ಕೆ ತರಬೇಕು. ಇಲಾಖೆ ವೈದ್ಯರಾಗಲಿ ಅಥವಾ ಸಿಬ್ಬಂದಿ ಯಾವುದೇ ಕಾರಣಕ್ಕೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವಂತಿಲ್ಲ ಎಂದು ಎಚ್ಚರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ರೋಗವಾಹಕಗಳು ಬರುವುದಕ್ಕಿಂತ ಮುಂಚೆ ಅವು ಬರದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವುದು ಮುಖ್ಯವಾಗಿರುತ್ತದೆ. ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಸಲಹೆ ಮಾಡಿದರು.

ಅಂಗನವಾಡಿ ಮತ್ತು ಶಾಲಾ ಆವರಣದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಕೊಳಚೆ ನೀರು ನಿಲ್ಲದಂತೆ ಸ್ವಚ್ಚವಾಗಿಡಿ. ಮಕ್ಕಳ ಆರೋಗ್ಯದ ಮೇಲೆ ಬಹು ಬೇಗ ಪರಿಣಾಮ ಬೀರುವ ಸಂಭವವಿರುತ್ತದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಶೇ100ರಷ್ಟು ಲಸಿಕೆ ಹಾಕಬೇಕು ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜಯಶ್ರೀ ಎಮ್ಮಿ ಮಾತನಾಡಿ, ಇಲ್ಲಿಯವರೆಗೂ ಒಂದೂ ಚಿಕುನ್ ಗುನ್ಯಾ ಪ್ರಕರಣ ಖಚಿತ ಪಟ್ಟಿರುವುದಿಲ್ಲ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಇದ್ದರು.

ಲಾರ್ವಾ ಸಮೀಕ್ಷೆ ಇಂದು

ಬಾಗಲಕೋಟೆ: ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜುಲೈ 12 ರಂದು ಬೆಳಿಗ್ಗೆ 10ಕ್ಕೆ ಬಾಗಲಕೋಟೆ ನವನಗರ ಹಾಗೂ ವಿದ್ಯಾಗಿರಿ ಸೇರಿದಂತೆ ಎಲ್ಲ ವಾರ್ಡ್‌ಗಳಲ್ಲಿ ಲಾರ್ವಾ ಸಮೀಕ್ಷೆ ಹಾಗೂ ನಿರ್ಮೂಲನಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜನರಿಗೆ ಡೆಂಗಿ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT