ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ಕಾರ್ಯವೈಖರಿಗೆ ಕಾರಜೋಳ ಅಸಮಾಧಾನ

ಆದ್ಯತೆ ಆಧಾರದ ಮೇಲೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
Last Updated 24 ಜನವರಿ 2021, 17:06 IST
ಅಕ್ಷರ ಗಾತ್ರ

ಹುಮನಾಬಾದ್ (ಬೀದರ್‌): ‘ಜಿಲ್ಲೆಯಲ್ಲಿ ಅನೇಕ ರಸ್ತೆಗಳು ಹದಗೆಟ್ಟರೂ ದುರಸ್ತಿಗೆ ಕ್ರಮಕೈಗೊಂಡಿಲ್ಲ. ಹಣಕಾಸು ವರ್ಷ ಪೂರ್ಣಗೊಳ್ಳಲು ಎರಡು ತಿಂಗಳು ಬಾಕಿ ಇದೆ. ಹತ್ತು ತಿಂಗಳು ಕೆಲಸ ಮಾಡದವರು ಎರಡು ತಿಂಗಳಲ್ಲಿ ಕೆಲಸ ಮಾಡಲು ಸಾಧ್ಯವೆ?’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಹುಮನಾಬಾದ್‌ನ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಬೀದರ್ ವಿಭಾಗ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

‘ಯೋಜನಾ ವೆಚ್ಚ ಕಡಿತಗೊಳಿಸಿದರೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದು. ಸ್ಥಳೀಯ ಶಾಸಕರ ಗಮನಕ್ಕೆ ತಂದು ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘2020–2021ನೇ ಸಾಲಿನಲ್ಲಿ ₹120 ಕೋಟಿ ವೆಚ್ಚದಲ್ಲಿ 22 ಕಿ.ಮೀ ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಈಗಾಗಲೇ 10.50 ಕಿ.ಮೀ ರಸ್ತೆ ನಿರ್ಮಿಸಲಾಗಿದೆ. ₹122 ಕೋಟಿ ವೆಚ್ಚದಲ್ಲಿ 45 ಕಿ.ಮೀ ಉದ್ದದ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದ್ದು, 13 ಕಿ.ಮೀ ರಸ್ತೆ ನಿರ್ಮಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘₹5.28 ಕೋಟಿ ವೆಚ್ಚದಲ್ಲಿ ರಾಜ್ಯ ಹೆದ್ದಾರಿಯಲ್ಲಿ ಮೂರು, ಜಿಲ್ಲಾ ಮುಖ್ಯ ರಸ್ತೆಯಲ್ಲಿ ಮೂರು ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ ಎರಡು ಸೇತುವೆಗಳನ್ನು ನಿರ್ಮಿಸಲಾಗಿದೆ’ ಎಂದು ಹೇಳಿದರು.

‘ಬಸವಕಲ್ಯಾಣ ಪಟ್ಟಣದ ಬಸವ ಮಹಾದ್ವಾರದಿಂದ–ತ್ರಿಪುರಾಂತ ವರೆಗಿನ ಚುತಷ್ಪಥ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಒದಗಿಸಲಾಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ಸರ್ಕಾರ ₹4 ಕೋಟಿ ಬಿಡುಗಡೆ ಮಾಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಸಂಸದ ಭಗವಂತ ಖೂಬಾ, ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ಚಂದ್ರಶೇಖರ ಪಾಟೀಲ, ಅರವಿಂದಕುಮಾರ ಅರಳಿ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT