ಶುಕ್ರವಾರ, ನವೆಂಬರ್ 15, 2019
20 °C
ಮೇಳೈಸಿದ 64ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಕನ್ನಡದಲ್ಲಿ ಇ–ಆಡಳಿತಕ್ಕೆ ಬದ್ಧ: ಕಾರಜೋಳ

Published:
Updated:
Prajavani

ಬಾಗಲಕೋಟೆ: ‘ಇ–ಆಡಳಿತದಲ್ಲಿ ಕನ್ನಡ ಬಳಕೆ ಇಂದಿನ ತುರ್ತು ಅಗತ್ಯವಾಗಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಇ–ಆಡಳಿತ ಜಾರಿಗೊಳಿಸಿ ಅಲ್ಲಿ ಸಂಪೂರ್ಣ ಕನ್ನಡದ ಬಳಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಣ ನೆರವೇರಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಖಾಸಗಿರಂಗ ಸೇರಿದಂತೆ ಎಲ್ಲ ವಲಯಗಳಲ್ಲೂ ಉದ್ಯೋಗ ನೀಡುವಾಗ ಕನ್ನಡಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂಬುದು ರಾಜ್ಯ ಸರ್ಕಾರದ ನಿಲುವು ಆಗಿದೆ. ಅದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ’ ಎಂದರು.

‘ನಾಡಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣಬದ್ಧವಾಗಿದೆ. ಅಭಿವೃದ್ಧಿಯಲ್ಲಿ ಸ್ಥಿರತೆ ಕಾಯ್ದುಕೊಂಡು ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಕಟಿಬದ್ಧವಾಗಿದೆ’ ಎಂದು ಹೇಳಿದರು.

‘ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸವಿದೆ. ಕನ್ನಡ ಸಾಹಿತ್ಯ ಕೃಷಿಯಲ್ಲಿ ಅಸಾಧಾರಣ ಸಾಧನೆಗೈದ ರತ್ನತ್ರಯರಲ್ಲಿ ಒಬ್ಬರಾದ ಮಹಾಕವಿ ರನ್ನ ನಮ್ಮ ಮುಧೋಳದವರು ಎಂಬುದು ಹೆಗ್ಗಳಿಕೆಯ ಸಂಗತಿ’ ಎಂದರು.

‘ಪ್ರವಾಹದಿಂದ ಜಿಲ್ಲೆಯ ಜನತೆ ಸಾಕಷ್ಟು ಕಷ್ಟ-ನಷ್ಟ ಅನುಭವಿಸಿದ್ದಾರೆ. ಪ್ರಾಣ ಹಾನಿ, ಬೆಳೆ ಹಾನಿಯಾಗಿದೆ. ಕಳೆದ ಆಗಸ್ಟ್‌ನಲ್ಲಿ  ಒಟ್ಟು 195 ಗ್ರಾಮಗಳು ಪ್ರವಾಹ ಪೀಡಿತವಾಗಿದ್ದು, 43,136 ಕುಟುಂಬಗಳ 1.49 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಪರಿಹಾರ ಕೇಂದ್ರಗಳಲ್ಲಿ ಊಟ ಮತ್ತು ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿತ್ತು. 50,352 ಕುಟುಂಬಗಳಿಗೆ ಸರ್ಕಾರ ತಲಾ ₹ 10 ಸಾವಿರ ತುರ್ತು ಪರಿಹಾರ ನೀಡಿದೆ’ ಎಂದರು.

ಈ ಸಂದರ್ಭದಲ್ಲಿ ಕಲಾದಗಿಯ ಹಣ್ಣು ಬೆಳೆಗಾರರ ಪ್ರೌಢಶಾಲೆಯ ವಿದ್ಯಾರ್ಥಿಗಳು ತೋರಿದ ಮಲ್ಲಕಂಬ ಪ್ರದರ್ಶನ ನೋಡುಗರನ್ನು ನಿಬ್ಬೆರಗಾಗಿಸಿತು. ಜೊತೆಗೆ ವಿದ್ಯಾಗಿರಿಯ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ, ಸಮೃದ್ಧಿ ಗುರುಕುಲದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. 

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಚನ್ನನಗೌಡ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಗರಿಮಾ ಪನ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಇದ್ದರು. 

ಪ್ರತಿಕ್ರಿಯಿಸಿ (+)