ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಸರ್ಕಾರ ವೈಫಲ್ಯದ ವಿರುದ್ಧ ಹೋರಾಟ- ಬಿ.ವೈ. ವಿಜಯೇಂದ್ರ

Published 31 ಡಿಸೆಂಬರ್ 2023, 13:11 IST
Last Updated 31 ಡಿಸೆಂಬರ್ 2023, 13:11 IST
ಅಕ್ಷರ ಗಾತ್ರ

ಬಾಗಲಕೋಟೆ: ರೈತರದ್ದೂ ಸೇರಿದಂತೆ ಯಾವುದೇ ಸಮಸ್ಯೆಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಬರದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬರಕ್ಕೂ, ನಮಗೂ ಸಂಬಂಧವಿಲ್ಲ ಎಂಬಂತಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ನಾಮಕವಾಸ್ತೆ ಚರ್ಚೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಸಚಿವ ಶಿವಾನಂದ ಪಾಟೀಲ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಒಂದು ರೂಪಾಯಿ ಅನುದಾನ ನೀಡದ್ದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್‌ ಶಾಸಕರು ತಲೆ ಎತ್ತಿ ತಿರುಗದಂತಾಗಿದೆ. ಬಿಜೆಪಿ ಜೆಡಿಎಸ್‌ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕಿಲ್ಲ. ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡುವುದಾಗಿ ಹೇಳುತ್ತಿದ್ದಾರೆ. ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದ್ದಾರೆ. ಇದು ಅವರ ಆದ್ಯತೆ ತೋರಿಸುತ್ತದೆ. ಅಲ್ಪಸಂಖ್ಯಾತರಿಗೆ ಕೊಡುವುದಕ್ಕೆ ವಿರೋಧವಿಲ್ಲ. ಆದರೆ, ರೈತರು, ಬಡವರು ಆದ್ಯತೆಯಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಗ್ಯಾರಂಟಿ ಮೇಲೆ ಜನರಿಗೆ ವಿಶ್ವಾಸವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ ಮೇಲೆ ವಿಶ್ವಾಸವಿದೆ. ಮೊನ್ನೆ ನಡೆದ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಇದನ್ನು ತೋರಿಸುತ್ತದೆ. 

ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ, ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಶಾಂತಗೌಡ ಪಾಟೀಲ, ಎ.ಎಸ್‌. ಪಾಟೀಲ ನಡಹಳ್ಳಿ ಇದ್ದರು.

ಇದಕ್ಕೂ ಮುನ್ನ ಮತಗಟ್ಟೆ ಅಧ್ಯಕ್ಷ ಪ್ರಕಾಶ ಅವರ ಮನೆಗೆ ಭೇಟಿ ನೀಡಿ, ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT