ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಲ್ಕು ಗುಂಪುಗಳಾಗಿವೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ, ಜಿ. ಪರಮೇಶ್ವರ್ ಅವರ ಗುಂಪಿನ ಜತೆಗೆ ದಲಿತರಲ್ಲಿಯೇ ಮುನಿಯಪ್ಪ ಅವರ ಗುಂಪೊಂದಿದೆ. ಅವರೇ ಕಿತ್ತಾಡಿಕೊಂಡು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ನಾನಾ, ನೀನಾ ಎಂದು ಕಿತ್ತಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ಸಂತೋಷ ಎಂದು ವ್ಯಂಗ್ಯ ಮಾಡಿದರು.
ರಾಜ್ಯದಲ್ಲಿ 50 ವರ್ಷಗಳಲ್ಲಿ ಕಂಡರಿಯದಂತಹ ಬರ ಪರಿಸ್ಥಿತಿ ಆವರಿಸಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು, ಅಧಿಕಾರಕ್ಕಾಗಿ ಪರಸ್ಪರ ಕಿತ್ತಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರವನ್ನು ಅಭದ್ರಗೊಳಿಸುವ ಯಾವುದೇ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ. ಜನರು ಸಂಪೂರ್ಣ ಬಹುಮತ ನೀಡಿದ್ದರೂ, ಅವರ ಪಕ್ಷದವರೇ ಸರ್ಕಾರ ಅಭದ್ರಗೊಳಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ 40ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದರು. ಇದು ಸರ್ಕಾರದ ದಿಕ್ಕನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಕನಿಷ್ಠ ₹10 ಸಾವಿರ ಕೋಟಿ ಅನುದಾನ ನೀಡಬೇಕು. ಮೂರನೇ ಹಂತದ ಯೋಜನೆ ಜಾರಿಗೆ ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ತೀವ್ರಗೊಳಿಸಬೇಕು. ಎರಡು ತಿಂಗಳಲ್ಲಿ ಕ್ರಮಕೈಗೊಳ್ಳದಿದ್ದರೆ, ಬಿಜೆಪಿ ಜನರಿಗಾಗಿ ಹೋರಾಟ ಆರಂಭಿಸಲಿದೆ ಎಂದು ಎಚ್ಚರಿಸಿದರು.
ಬರದಿಂದ ನಷ್ಟಕ್ಕೆ ಈಡಾಗಿರುವ ರೈತರಿಗೆ ಕೂಡಲೇ ಪರಿಹಾರ ನೀಡಬೇಕು. ಹಿಂದೆ ಬಿಜೆಪಿ ಸರ್ಕಾರ ನೀಡಿದ್ದಂತೆ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‌ಗೆ ₹10 ಸಾವಿರ ಹೆಚ್ಚುವರಿ ಪರಿಹಾರ ನೀಡಬೇಕು. ಜನರು ಗುಳೆ ಹೋಗುವುದನ್ನು ತಡೆದು ಗ್ರಾಮಗಳಲ್ಲಿಯೇ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಆಗ್ರಹಿಸಿದರು.
10 ಎಚ್‌ಪಿ ವರೆಗಿನ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ರೈತರೇ ವೆಚ್ಚ ಭರಿಸುವ ನಿರ್ಣಯವನ್ನು ಹಿಂಪಡೆಯಬೇಕು. ಎಲ್ಲ ನಿಗಮಗಳಿಗೆ ತಲಾ ₹300 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ನಿತ್ಯ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್ ನೀಡಬೇಕು. ಎಲ್ಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ತಲಾ ₹2 ಸಾವಿರ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ ಪ್ರತ್ಯೇಕವಾಗಿ ತಲಾ 10 ಕೆಜಿ ಅಕ್ಕಿ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.