ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆಗೆ ತಿರುಗಿದ ಹಿಜಾಬ್, ಕೇಸರಿ ಶಾಲು ವಿವಾದ; ಕಲ್ಲು ತೂರಾಟ, ಲಾಠಿ ಪ್ರಹಾರ

Last Updated 8 ಫೆಬ್ರುವರಿ 2022, 6:21 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರದ ವಿವಾದ ತಾರಕಕ್ಕೇರಿದೆ. ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ಗಾಯವಾಗಿದೆ. ಪರಿಸ್ಥಿತಿ ತಹಬದಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಬನಹಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮಂಗಳವಾರ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದರೆ, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಕಾಲೇಜಿನ ಆಡಳಿತ ಮಂಡಳಿ ಇಬ್ಬರನ್ನೂ ಗೇಟ್‌ನಲ್ಲಿ ತಡೆದು ಸಮವಸ್ತ್ರ ಮಾತ್ರ ಧರಿಸಿ ಬರುವಂತೆ ಸೂಚಿಸಲಾಯಿತು. ಆಗ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಕಾಲೇಜಿನ ಆವರಣದ ಒಳಗೆ ನುಗ್ಗಿ ಪ್ರತಿಭಟನೆ ಮಾಡಿದ್ದಾರೆ. ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರು ಜಮಖಂಡಿ–ಕುಡಚಿ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಅವರೊಂದಿಗೆ ಪೋಷಕರು ಸೇರಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಎರಡೂ ಕೋಮಿನ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಕಾಲೇಜಿಗೆ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ ಭೇಟಿ ನೀಡಿ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT