ಸೋಮವಾರ, ಸೆಪ್ಟೆಂಬರ್ 26, 2022
22 °C

ಲೋಕಾಯುಕ್ತ: ಹೆಗ್ಡೆ ಶಿಫಾರಸು ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಲೋಕಾಯುಕ್ತ ಸಂಸ್ಥೆ ಬಲಪಡಿಸಲು ಹೈಕೋರ್ಟ್‌ ಹಾಗೂ ನಿವೃತ್ತ ಲೋಕಾಯುಕ್ತ ಸಂತೋಷ ಹೆಗ್ಡೆ ಮಾಡಿರುವ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ, ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮರ್ಥ ಅಧಿಕಾರಿಗಳ ನಿಯೋಜನೆ, ವರ್ಗಾವಣೆಗೆ ಲೋಕಾಯುಕ್ತರ ಅನುಮತಿ, ಮೂರು ವರ್ಷ ಅಧಿಕಾರಿಗಳ ವರ್ಗಾವಣೆಗೆ ತಡೆ, ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಬೇಕು ಎಂದು ಶಿಪಾರಸು ಮಾಡಿದ್ದಾರೆ ಎಂದು ತಿಳಿಸಿದರು.

ಲೋಕಾಯುಕ್ತ ದುರ್ಬಲಗೊಳಿಸಿ, ಎಸಿಬಿ ಸ್ಥಾಪಿಸಿದ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಹೈಕೋರ್ಟ್ ಬಲ ನೀಡಿದೆ. ಸಿದ್ದರಾಮಯ್ಯ ಭ್ರಷ್ಟಾಚಾರದ ಕಿಂಗ್ ಆಗಿದ್ದಾರೆ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಲೋಕಾಯುಕ್ತಕ್ಕೆ ಬಲ ತುಂಬುವುದಾಗಿ ಹೇಳಿದ್ದ ಬಿಜೆಪಿಯು ಮಾತಿಗೆ ತಪ್ಪಿತ್ತು. ನಾವು ನಡೆಸಿದ ಸುದೀರ್ಘ ಹೋರಾಟ ಪರಿಣಾಮ ಲೋಕಾಯುಕ್ತಕ್ಕೆ ಬಲ ಬಂದಿದೆ ಎಂದು ಹೇಳಿದರು.

ಮೂರು ಕರಾಳ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದೆ. ಸೆ.24ರಂದು ತುಮಕೂರು, 25 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತಿದೆ. ನ.24 ರಿಂದ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಜಾಥಾ, ಡಿ.5 ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು. ಜನತಂತ್ರ ಸಮಾಜ, ಜನಾಂದೋಲನ ಮಹಾಮೈತ್ರಿ ಸೇರಿದಂತೆ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಜಾಥಾ ನಡೆಸಲು ಉದ್ದೇಶಿಸಲಾಗಿದೆ  ಎಂದರು.

ಅರ್ಕಾವತಿ ಹಗರಣದಂತಹ ಅಕ್ರಮಗಳ ಬಗ್ಗೆ ಇಡೀ ಸಮಾಜವೇ ಹೋರಾಟ ನಡೆಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಬ್ಬರು ಹೋರಾಟಗಾರರು ಅರ್ಜಿ ಸಲ್ಲಿಸಿ ನಂತರ ವಾಪಸ್ ಪಡೆದಿದ್ದಾರೆ. ನಾವು ನಡೆಸಿದ ಹೋರಾಟಕ್ಕೆ ಸದ್ಯ ಜಾರಿ ನಿರ್ದೇಶನಾಲಯ ಕಣ್ಣು ತೆರೆದಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಶೇ40ರಷ್ಟು ಕಮಿಷನ್ ಆರೋಪ ಕೇಳಿಬಂದಿದೆ. ಪ್ರಧಾನಿ ಕೂಡ ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ. ಲಂಚ ತೆಗೆದುಕೊಳ್ಳುವವರು ಅಷ್ಟೇ ಅಲ್ಲ, ಲಂಚ ನೀಡುವವರಿಗೂ ಶಿಕ್ಷೆ ಆಗಬೇಕು. ಲೋಕಾಯುಕ್ತವು ಸಮರ್ಥವಾಗಿ ಕಾರ್ಯನಿರ್ವಹಿಸಿದರೆ ಭ್ರಷ್ಟಾಚಾರ ನಿಗ್ರಹ ಸಾಧ್ಯವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು