ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | 15 ಮೇವು ಬ್ಯಾಂಕ್ ಸ್ಥಾಪನೆ: ಸಚಿವ ತಿಮ್ಮಾಪುರ

Published 24 ನವೆಂಬರ್ 2023, 15:40 IST
Last Updated 24 ನವೆಂಬರ್ 2023, 15:40 IST
ಅಕ್ಷರ ಗಾತ್ರ

ಬಾಗಲಕೋಟೆ: ಜಾನುವಾರುಗಳಿಗೆ ಅವಶ್ಯವಿರುವ ಮೇವಿನ ಲಭ್ಯತೆ ಖಾತ್ರಿಪಡಿಸಲು 35,245 ಮೇವಿನ ಕಿಟ್‌  ವಿತರಣೆ, 15 ಮೇವಿನ ಬ್ಯಾಂಕ್ ಸ್ಥಾಪನೆ ಹಾಗೂ 10 ಗೋಶಾಲೆಗಳನ್ನು ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಬರ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಪೀಡಿತ ಪ್ರದೇಶಗಳಲ್ಲಿ ನಿರಂತರ ಉದ್ಯೋಗ ಒದಗಿಸಲು ಕ್ರಮ ವಹಿಸಲಾಗಿದೆ. ನರೇಗಾದಡಿ 43.62 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಕೂಲಿ ದಿನಗಳನ್ನು 100ರಿಂದ 150ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಆಲಮಟ್ಟಿ ಜಲಾಶಯದಿಂದ ಮುಳುಗಡೆಯಾದ ಪ್ರದೇಶದಲ್ಲಿ ಮೇವು ಬೆಳೆಯಲು ಕ್ರಮವಹಿಸಿ. ಎಲ್ಲಿ ಬೆಳೆ ಬೆಳೆಯಲು ಸಾಧ್ಯ ಎಂಬ ಮಾಹಿತಿ ನೀಡುವಂತೆ ಯುಕೆಪಿ ಮಹಾ ವ್ಯವಸ್ಥಾಪಕರಿಗೆ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ತಹಶೀಲ್ದಾರ್‌ರಿಗೆ ಸೂಚಿಸಲಾಗಿದೆ. ಸಮಸ್ಯೆ ಉಂಟಾದಲ್ಲಿ ಅವರೇ ಜವಾಬ್ದಾರರು ಎಂಬ ಎಚ್ಚರಿಗೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 1,54,482 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ, 39,623 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ₹1,998 ಕೋಟಿ ಹಾನಿಯಾಗಿದೆ. ಬರ ಮಾರ್ಗಸೂಚಿ ಪ್ರಕಾರ ಜಿಲ್ಲೆಯಿಂದ ₹265 ಕೋಟಿ ಸಹಾಯಧನ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು 4,244 ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 199 ಗ್ರಾಮಗಳ ಸಂಭವನೀಯ ಪಟ್ಟಿ ತಯಾರಿಸಿದ್ದು, ಪರಿಸ್ಥಿತಿಯನ್ನು ಎದುರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು.

ಕುಡಿಯುವ ನೀರಿಗಾಗಿ ಜಿಲ್ಲಾಡಳಿತದ ಬಳಿ ₹25 ಕೋಟಿ ಇದೆ. 15 ದಿನಗಳಿಗೊಮ್ಮೆ ಸಭೆ ನಡೆಸಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಕುರಿತು ಚರ್ಚೆ ಮಾಡಲಾಗುತ್ತಿದೆ. ಪ್ರತಿ ತಾಲ್ಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಶಾಸಕರಾದ ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT