ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯಪಾಲರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ’ ಎಂದರು.
‘ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಇಂತಹ ಪಿತೂರಿಗಳನ್ನು ಎದುರಿಸುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷಕ್ಕೆ ಮತ್ತು 136 ಶಾಸಕರನ್ನು ಆಯ್ಕೆ ಮಾಡಿದ ಜನತೆಗೆ ಇದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು. ಅವರ ಹಿಂದೆ ನಾವಿದ್ದೇವೆ’ ಎಂದಿದ್ದಾರೆ.
ಇತರ ರಾಜ್ಯಗಳಲ್ಲಿ ಇದೇ ರೀತಿಯ ಅಧಿಕಾರ ದುರುಪಯೋಗದ ಉದಾಹರಣೆಗಳನ್ನು ಉಲ್ಲೇಖಿಸಿ ಇಡಿ, ಐಟಿ ಮತ್ತು ರಾಜಭವನ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರವನ್ನು ತಿರಸ್ಕರಿಸಿದರು.