ಮಂಗಳವಾರ, ಅಕ್ಟೋಬರ್ 20, 2020
21 °C
ಜಿಲ್ಲಾ ಪಂಚಾಯ್ತಿ ಮಾಸಿಕ ಕೆಡಿಪಿ ಸಭೆಯಲ್ಲಿ ಮಹಾಂತೇಶ ಉದಪುಡಿ ಆರೋಪ

ಶಿಕ್ಷಕರಿಗೆ ಬಡ್ತಿ: ವ್ಯಾಪಕ ಅವ್ಯವಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ‘ಜಿಲ್ಲೆಯಲ್ಲಿ ಶಿಕ್ಷಕರಿಗೆ ಬಡ್ತಿ ನೀಡುವ ವಿಚಾರದಲ್ಲಿ ನಿಯಮಾವಳಿ ಗಾಳಿಗೆ ತೂರಿ ವ್ಯಾಪಕ ಅವ್ಯವಹಾರ ನಡೆಸಲಾಗಿದೆ. ಹಿರಿಯ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ’ ಎಂದು ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ ಆರೋಪ ಮಾಡಿದರು.

ನಗರದಲ್ಲಿ ಮಂಗಳವಾರ ನಡೆದ ಜಿಲ್ಲಾ ಪಂಚಾಯ್ತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವುದೇ ಕೆಲಸ ಆಗುವುದಿಲ್ಲ. ಶಿಕ್ಷಕರು ಬಡ್ತಿ ಪಡೆಯಲು ₹50 ಸಾವಿರ ಲಂಚ ಕೊಡಬೇಕು.
ಹೊಸ ಶಾಲೆಗೆ ಪರವಾನಗಿ ಪಡೆಯಲು ₹1 ಲಕ್ಷ ಕೊಡಬೇಕಿದೆ. ಮಧ್ಯವರ್ತಿಗಳ ಮೂಲಕ ದುಡ್ಡು ಮಾಡಲಾಗುತ್ತಿದೆ. ಒಟ್ಟಾರೆ ಶಿಕ್ಷಣ ಇಲಾಖೆಯೇ ಹಳ್ಳ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲಾಖೆಯ ಮಾನದಂಡಗಳನ್ನು ಗಾಳಿಗೆ ತೂರಿ ಶಾಲೆಗೆ ಪರವಾನಗಿ ನೀಡಿರುವುದು ಹಾಗೂ ಬಡ್ತಿ ನೀಡುವಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ಸರ್ಕಾರ ತನಿಖೆ ನಡೆಸಲಿ. ಅದಕ್ಕೆ ಬೇಕಾದ ಸಾಕ್ಷ್ಯಗಳನ್ನು ನಾನು ಕೊಡಲಿದ್ದೇನೆ. ನಾನು ಮಾಡುತ್ತಿರುವ ಆರೋಪ ಸಾಬೀತಾದರೆ ಡಿಡಿಪಿಐ ರಾಜೀನಾಮೆ ಕೊಡುವರಾ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಹಾಜರಿದ್ದ ಡಿಡಿಪಿಐ ಶ್ರೀಶೈಲ ಬಿರಾದಾರ ಅದಕ್ಕೆ ಪ್ರತಿಕ್ರಿಯಿಸಿ, ನಾನೇಕೆ ರಾಜೀನಾಮೆ ಕೊಡಲಿ. ತನಿಖೆ ಮಾಡಿ ಎಂದು ಹೇಳಿದರು. ಅವ್ಯವಹಾರದ ತನಿಖೆಗೆ ಸಮಿತಿಯೊಂದನ್ನು ರಚಿಸಿ ಎಂದು ಉದಪುಡಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ ಅವರನ್ನು ಈ ವೇಳೆ ಒತ್ತಾಯಿಸಿದರು.

ಇಳಕಲ್ ನಗರ ಹಾಗೂ ಅನಗವಾಡಿ ಗ್ರಾಮದಲ್ಲಿ ಆಯುಷ್ ಇಲಾಖೆಯ ಆಸ್ಪತ್ರೆ ನಿರ್ಮಾಣ ಕಾಮಗಾರಿಯಲ್ಲೂ ಭ್ರಷ್ಟಾಚಾರ ನಡೆದಿದೆ. ವೈದ್ಯರೇ ಕಟ್ಟಡದ ಸುಣ್ಣ–ಬಣ್ಣ ಮಾಡುವ ಹೊಣೆ ಹೊತ್ತಿದ್ದಾರೆ. ಅದರ ಬಗ್ಗೆಯೂ ತನಿಖೆಯಾಗಲಿ ಎಂದು ಉದಪುಡಿ ಆಗ್ರಹಿಸಿದರು.

ಸಭೆಯಲ್ಲಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಖೋತ, ಜಿಲ್ಲಾ ಪಂಚಾಯ್ತಿ ಸಿಇಒ ಟಿ.ಭೂಬಾಲನ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಯಶವಂತ ಗುರುಕಾರ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು