ಬಾಗಲಕೋಟೆ: ಫಲಾನುಭವಿಗಳನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಪ್ರಾಥಮಿಕ ಹಂತದಲ್ಲೇ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಲೀಡ್ ಬ್ಯಾಂಕ್ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.
ರೈತರ ಮಕ್ಕಳು ಶಿಕ್ಷಣ ಸಾಲ ಸೌಲಭ್ಯಕ್ಕಾಗಿ ಬಂದಲ್ಲಿ ನಿಯಮಾವಳಿಗಳು ಸ್ವಲ್ಪ ಸರಳವಾಗಿರಲಿ. ಯಾವ, ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬುದನ್ನು ಫಲಕಗಳಲ್ಲಿ ಪ್ರದರ್ಶಿಸಿ, ತಾಂತ್ರಿಕ ತೊಂದರೆಗಳಿದ್ದಲ್ಲಿ ತಿಳಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಬ್ಯಾಂಕ್‍ಗಳಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆ ಇರುವುದು ಕೂಡ ಅರ್ಹ ಫಲಾನುಭವಿಗಳು ಪರದಾಡಲು ಒಂದು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಬ್ಯಾಂಕ್‍ಗಳಿಗೆ ತೆರಳಿ ವಿವಿಧ ಯೋಜನೆಯಡಿ ಸಿಗುವ ಸಾಲ ಸೌಲಭ್ಯವನ್ನು ಫಲಾನುಭವಿಗಳಿಗೆ ದೊರಕಿಸಿಕೊಡಿ. ಸಣ್ಣಪುಟ್ಟ ಕಾರಣಕ್ಕೆ ತಡೆ ಹಿಡಿಯುವ ಕೆಲಸ ಮಾಡಬೇಡಿ ಎಂದು ವಿವಿಧ ನಿಗಮಗಳ ಅಧಿಕಾರಿಗಳಿಗೆ ಎಚ್ಚರಿಸಿದರು.
ಇಂದಿನ ದಿನಮಾನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿರವುದರಿಂದ ಯುವ ಸಮೂಹವನ್ನು ಸ್ವಯಂ ಉದ್ಯೋಗಕ್ಕೆ ಉತ್ತೇಜಿಸಬೇಕಾಗಿದೆ. ಕೃಷಿಗಿಂತ ಇತತೆ ಉದ್ಯಮಗಳತ್ತ ಒಲವು ತೋರುತ್ತಿರುವುದರಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳ ಬಗ್ಗೆ ಪ್ರಚಾರ ಮಾಡಿ, ಸೂಕ್ತ ಮಾರ್ಗದರ್ಶನ ನೀಡಿ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಿ ಯುವಕರು ನವ ಉದ್ಯಮಿಗಳಾಗಲು ಪ್ರೇರೇಪಿಸಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಕೆನರಾ ಬ್ಯಾಂಕಿನಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭಿಗಳ ಅರ್ಜಿಗಳು ತಿರಸ್ಕøತಗೊಂಡಿದ್ದು, ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರು ಗಮನ ಹರಿಸಬೇಕು. ಯಾವ ಬ್ಯಾಂಕಿನಲ್ಲಿ ಅರ್ಜಿಗಳು ಬಾಕಿ ಉಳಿದಿವೆಯೋ ಅವೆಲ್ಲವೂ ಮುಂದಿನ ಹದಿನೈದು ದಿನದೊಳಗಾಗಿ ವಿಲೆವಾರಿಯಾಗಬೇಕು. ಸ್ವ ಸಹಾಯ ಗುಂಪುಗಳಿಗೆ ಸಾಲ ನೀಡಲು ಪ್ಯಾನ್ ಕಾರ್ಡ ಕಡ್ಡಾಯ ಅಂತ ಇರುವದಿಲ್ಲ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಬಾಗಲಕೋಟ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ರಾಜಕುಮಾರ ಹೂಗಾರ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.