ಬಾಗಲಕೋಟೆ: ಗೃಹಲಕ್ಷ್ಮಿ ಯೋಜನೆ ಅರ್ಜಿ ನೋಂದಣಿಗೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜು.19 ರಂದು ರಾಜ್ಯಮಟ್ಟದಲ್ಲಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. 20 ರಿಂದ ಜಿಲ್ಲೆಯ ಗ್ರಾಮ ಓನ್ ಸೆಂಟರ್ ಬಾಪೂಜಿ ಸೇವಾ ಕೇಂದ್ರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರೆಯಲಾಗುವ ಕೇಂದ್ರಗಳಲ್ಲಿ ಮಹಿಳಾ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದರು.
ಪಲಾನುಭವಿಗಳ ನೋಂದಣಿ ಮಾಡಲು ಪ್ರತಿ ಒಂದು ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಕಡ್ಡಾಯವಾಗಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಿದ್ದು, ಅಗತ್ಯವಿರುವ ಸೇವಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ. ಎಚ್. ಮಾತನಾಡಿ, ನೋಂದಣಿಗೆ ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಡಿತರ ಚೀಟಿ ಸಂಖ್ಯೆ, ಯಜಮಾನಿಯ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಅಗತ್ಯವಿರುತ್ತದೆ ಎಂದರು.
ವಾರದ ಎಲ್ಲ ದಿನಗಳಲ್ಲೂ ನೋಂದಣಿಗೆ ಅವಕಾಶವಿದ್ದು, ಪ್ರತಿ ಕೇಂದ್ರದಲ್ಲೂ ಬೆಳಿಗ್ಗೆ 30 ಮತ್ತು ಮಧ್ಯಾಹ್ನ 30ರಂತೆ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಮಾಹಿತಿಗೆ ಸಹಾಯವಾಣಿ ಸಂಖ್ಯೆ 1902 ಸಂಪರ್ಕಿಸಬಹುದಾಗಿರುತ್ತದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪರಶುರಾಮ್ ಶಿನ್ನಾಳಕರ್, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.