ಸೋಮವಾರ, ಮೇ 25, 2020
27 °C

ರಾಜ್ಯದಲ್ಲಿ ಕೋವಿಡ್‌ಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಬೆಂಗಳೂರು: ಕೋವಿಡ್‌ ಪೀಡಿತರಾಗಿದ್ದ ವ್ಯಕ್ತಿಯೊಬ್ಬರು ಬಾಗಲಕೋಟೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೋಗಕ್ಕೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಹೊಸದಾಗಿ ಮೂರು ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 128ಕ್ಕೆ ತಲುಪಿದೆ. 

ಮಾ.9ರಂದು ಬೆಂಗಳೂರಿನಲ್ಲಿ ವರದಿಯಾದ ಕೋವಿಡ್‌–19 ಪ್ರಕರಣ ರಾಜ್ಯದಾದ್ಯಂತ ವ್ಯಾಪಿಸಿಕೊಳ್ಳುತ್ತಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಳಗಾವಿಯಲ್ಲಿ ಮೂರು ಪ್ರಕರಣಗಳು ಹೊಸದಾಗಿ ವರದಿಯಾಗಿದೆ. ಸೋಂಕು ಶಂಕೆ ಹಿನ್ನೆಲೆಯಲ್ಲಿ 57 ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲಾಗಿದೆ. 344 ಮಂದಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 

‘ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್‌ ಸಭೆಗೆ ಹೋದವರಲ್ಲಿ 288 ಮಂದಿಯ ರಕ್ತ ಹಾಗೂ ಗಂಟಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ ಈವರೆಗೆ 13 ಮಂದಿಗೆ ಸೋಂಕು ದೃಢಪಟ್ಟಿದೆ. 187 ಮಂದಿಗೆ ಸೋಂಕು ಹರಡಿಲ್ಲ ಎನ್ನುವುದು ವರದಿಯಲ್ಲಿ ಸ್ಪಷ್ಟವಾಗಿದೆ.

ಉಳಿದವರ ವರದಿ ಬರಬೇಕು. ಅಲ್ಲಿಗೆ ಹೋದವರಲ್ಲಿ 134 ಮಂದಿಯನ್ನು ಬೆಂಗಳೂರಿನ ಹಜ್‌ ಭವನದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ 19 ಮಂದಿ ವಿದೇಶಿಯರೂ ಇದ್ದಾರೆ. ಇದೇ ರೀತಿ ವಿವಿಧ ಜಿಲ್ಲೆಗಳಲ್ಲಿಯೂ ಕ್ವಾರಂಟೈನ್ ಮಾಡಲಾಗುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು. 

‘ನಂಜನಗೂಡಿನ ಔಷಧಿ ತಯಾರಿಕ ಕಂಪನಿಯ ನೌಕರರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಗೆ (ಎನ್‌ಐವಿ) ಕಳುಹಿಸಲಾಗಿದ್ದು, ವರದಿ ಎದುರು ನೋಡುತ್ತಿದ್ದೇವೆ’ ಎಂದು ತಿಳಿಸಿದರು. 

ಕೊರೊನಾ ಸೋಂಕಿಗೆ ಬಳಲಿದವರಲ್ಲಿ ಈವರೆಗೆ 11 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಮನೆಗೆ ಹೋಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು