ಗುರುವಾರ , ನವೆಂಬರ್ 21, 2019
23 °C
ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ: ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ

ಆಪರೇಷನ್ ಕಮಲ: ಸರ್ಕಾರ ವಜಾಕ್ಕೆ ಆಗ್ರಹ

Published:
Updated:
Prajavani

ಬಾಗಲಕೋಟೆ: ಆಪರೇಷನ್‌ ಕಮಲದ ಮೂಲಕ ವಾಮ ಮಾರ್ಗದಿಂದ ಅಧಿಕಾರಕ್ಕೇರಿರುವ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಮಂಗಳವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ‌ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕುಮ್ಮಕ್ಕಿನಿಂದಲೇ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡಿದೆ ಎಂಬ ಸತ್ಯವನ್ನು ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಹಿರಿಯ ಮುಖಂಡರ ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುಪ್ರೀಂಕೋರ್ಟ್ ಕೂಡ ಅವರ ಆಡಿಯೊವನ್ನು ಸಾಕ್ಷ್ಯವಾಗಿ ಪರಿಗಣಿಸಲು ಒಪ್ಪಿದೆ. ಹೀಗಾಗಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

’ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಶಾಸಕರು ರಾಜೀನಾಮೆ ಕೊಡಿಸಿ ಅವರನ್ನು ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ತಿಂಗಳುಗಟ್ಟಲೇ ಇಡುವಲ್ಲಿ ಕೇಂದ್ರದ ನಾಯಕರು ಕೈ ಜೋಡಿಸಿದ್ದಾರೆ‘ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಆರೋಪಿಸಿದರು.

‘ಎಲ್ಲವೂ ಅಮಿತ್ ಶಾ ಅವರ ಮಾರ್ಗದರ್ಶನದಂತೆ ನಡೆದಿದೆ. ಆಪರೇಷನ್ ಕಮಲ ನಡೆಸಿರುವುದನ್ನು ಸ್ವತಃ ಒಪ್ಪಿಕೊಂಡಿರುವುದರಿಂದ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲು ನೈತಿಕ ಹಕ್ಕಿಲ್ಲ’ ಎಂದು ಹೇಳಿದರು.

ಮಾಜಿ ಶಾಸಕ ಎಚ್.ವೈ.ಮೇಟಿ ಮಾತನಾಡಿ, ‘ವಾಮಮಾರ್ಗದ ಮೂಲಕ  ಅಧಿಕಾರ ಪಡೆದಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ರಾಷ್ಟ್ರಪತಿಗಳು ತಕ್ಷಣ ಬಿಜೆಪಿ ಸರ್ಕಾರವನ್ನು ವಜಾಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಕುಮ್ಮಕ್ಕು ನೀಡಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ, ಕೆಪಿಸಿಸಿ ಮುಖಂಡ ಬಸವಪ್ರಭು ಸರನಾಡಗೌಡ, ಮುಧೋಳದ ಕಾಂಗ್ರೆಸ್ ಮುಖಂಡ ಸತೀಶ ಬಂಡಿವಡ್ಡರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಎಂ.ಎಲ್.ಶಾಂತಗಿರಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಸರಸ್ವತಿ ಈಟಿ, ವಕ್ತಾರರಾದ ಎನ್.ಬಿ.ಗಸ್ತಿ, ಆನಂದ ಜಿಗಜಿನ್ನಿ, ಪದಾಧಿಕಾರಿಗಳಾದ ಮುತ್ತು ಜೋಳದ, ಮಂಜುನಾಥ ವಾಸನದ ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)