ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಪದಾಧಿಕಾರಿಗಳ ರಾಜೀನಾಮೆ ನಿರ್ಧಾರ

ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಮಾವಿನಮರದ ವಿರುದ್ಧ ಆಕ್ರೋಶ
Last Updated 15 ಅಕ್ಟೋಬರ್ 2020, 16:40 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಮಾವಿನಮರದ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದ್ದಾರೆ’ ಎಂದು ಆರೋಪಿಸಿ ಪಕ್ಷದ ರಾಜ್ಯ ಕಾರ್ಯದರ್ಶಿ ರವಿ ಹುಣಶ್ಯಾಳ ನೇತೃತ್ವದಲ್ಲಿ ಜಿಲ್ಲೆ ಹಾಗೂ ತಾಲ್ಲೂಕಿನ ವಿವಿಧ ಘಟಕಗಳ ಪದಾಧಿಕಾರಿಗಳು ರಾಜೀನಾಮೆಗೆ ಮುಂದಾಗಿದ್ದಾರೆ.

ಸಾಮೂಹಿಕವಾಗಿ ರಾಜೀನಾಮೆ ನೀಡುವ ವಿಷಯವನ್ನು ನಗರದಲ್ಲಿಗುರುವಾರ ಸುದ್ದಿ ಗೋಷ್ಠಿಯಲ್ಲಿ ರವಿ ಹುಣಶ್ಯಾಳ ಪ್ರಕಟಿಸಿದರು. ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಳುಹಿಸುತ್ತಿರುವುದಾಗಿ ಹೇಳಿದರು.

‘ಹನುಮಂತ ಮಾವಿನಮರದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಪಕ್ಷ ಸಂಘಟನೆಯಲ್ಲಿ ಗೊತ್ತು–ಗುರಿ ಇಲ್ಲದೇ ಮಾವಿನಮರದ ಹೊರಟಿದ್ದಾರೆ. ಕಾರ್ಯಕರ್ತರ ಸಮಸ್ಯೆಗಳನ್ನು ಕೇಳದೇ ತಮ್ಮದೇ ನಿರ್ಧಾರ ಕೈಗೊಳ್ಳುತ್ತಿದ್ದಾರೆ’ ಎಂದು ಹೇಳಿದರು.

‘ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಂಜುನಾಥ ಗುಬ್ಬಿ ಅವರನ್ನು ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆ ಆದೇಶವನ್ನು ಮಾವಿನಮರದ ತಡೆ ಹಿಡಿಸಿದ್ದಾರೆ’ ಎಂದು ಆರೋಪಿಸಿದರು.

‘ಪಕ್ಷದ ರಾಜ್ಯ ಮಟ್ಟದ ನಾಯಕರು ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಜೆಡಿಎಸ್‌ನಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ, ಕಾರ್ಯಾಧ್ಯಕ್ಷನಾಗಿ ನಾನು ಈ ಹಿಂದೆ ಕೆಲಸ ಮಾಡಿದ್ದೇನೆ. ಆಗ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದೇನೆ’ ಎಂದರು.

ಶಂಕರ ನಾಯಕ ಮಾತನಾಡಿ, ‘ಉತ್ತರ ಕರ್ನಾಟಕ ಭಾಗದವರನ್ನು ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ. ಪಕ್ಷ ಅಧಿಕಾರದಲ್ಲಿ ಇದ್ದಾಗ ಯಾವುದೇ ನಿಗಮ–ಮಂಡಳಿಗಳಲ್ಲಿ ಸ್ಥಾನಮಾನ ನೀಡದೇ ದೂರವಿಟ್ಟಿದ್ದರು. ಮುಂದಿನ ದಿನಗಳಲ್ಲಿ ಯಾವುದೇ ಪಕ್ಷಕ್ಕೆ ಸೇರದೇ ರೈತರ ಪರ ಹೋರಾಟ ಮಾಡುತ್ತೇನೆ’ ಎಂದರು.

ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಭುವನೇಶ್ವರಿ ಹಾದಿಮನಿ, ರೈತ ಘಟಕದ ಅಧ್ಯಕ್ಷ ಶಂಕರಪ್ಪ ಜೀರಗಾಳ, ಬೀಳಗಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಜಕ್ಕನಗೌಡರ, ಜಿಲ್ಲಾ ಘಟಕದ ಉಪಾಧ್ಯಕ್ಷ ಎ.ಆರ್.ಬಿಸನಾಳ, ಗುರುನಾಥ ಸಿಂಗರಡ್ಡಿ, ಮುಧೋಳ ನಗರ ಘಟಕದ ಅಧ್ಯಕ್ಷ ಮಲ್ಲು ಹೊಸಕೋಟಿ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಶೆಟ್ಟರ, ಸಂಘಟನಾ ಕಾರ್ಯದರ್ಶಿ ಶಂಕರ ಹಲಗಲಿ ರಾಜೀನಾಮೆ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT