ಮಹಾಲಿಂಗಪುರ: ‘ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ. ಅನೇಕ ಹೋರಾಟಗಾರರ ತ್ಯಾಗ ಬಲಿದಾನದ ಶ್ರಮದ ಕೊಡುಗೆಯಿಂದ ಬಂದಿದೆ. 1824ರಲ್ಲೇ ಬ್ರಿಟೀಷರ ಎದೆ ನಡುಗಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ದೇಶ ಭಕ್ತಿ ಇಂದಿನ ಜನಾಂಗಕ್ಕೆ ಸ್ಫೂರ್ತಿಯಾಗಿದೆ’ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಪಟ್ಟಣದ ಕರಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ಹಮ್ಮಿಕೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 228ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ ಮಾತನಾಡಿ, ‘ರಾಯಣ್ಣನ ದೇಶಭಕ್ತಿಗೆ ರಾಯಣ್ಣನೇ ಸಾಟಿ. ಇಂದಿನ ಯುವ ಜನತೆಗೆ ಸ್ಫೂರ್ತಿಯ ಚಿಲುಮೆ ಆಗಿರುವ ರಾಯಣ್ಣನ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.
ಚಿಮ್ಮಡದ ವಿರಕ್ತಮಠದ ಪ್ರಭು ಸ್ವಾಮೀಜಿ, ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಮಹೇಶ ಇಟಕನ್ನವರ ಮಾತನಾಡಿದರು.
ಪುರಸಭೆ ಮಾಜಿ ಅಧ್ಯಕ್ಷ ಜಿ.ಎಸ್.ಗೊಂಬಿ, ಬಸವರಾಜ ಮೇಟಿ, ಸಂಗಮೇಶ ಹಿಡಕಲ್ಲ, ಭೀಮಶಿ ತಿಮ್ಮಾಪುರ, ಗಂಗಾಧರ ಮೇಟಿ, ಲಕ್ಷ್ಮಣ ಕಿಶೋರ ಇದ್ದರು.