ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾವಹಿಸಿ

ಬರ ನಿರ್ವಹಣೆ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಸೂಚನೆ
Published 14 ಮಾರ್ಚ್ 2024, 14:43 IST
Last Updated 14 ಮಾರ್ಚ್ 2024, 14:43 IST
ಅಕ್ಷರ ಗಾತ್ರ

ಬಾಗಲಕೋಟೆ: ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಬರ ನಿರ್ವಹಣೆ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದರು.

ಎಲ್ಲಿ ಅಗತ್ಯವಿದೆಯೋ ಅಂತಹ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಅಗತ್ಯ ಬಿದ್ದಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಗೆ ಕ್ರಮವಹಿಸಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಸಮರ್ಪಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಹೇಳಿದರು.

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ತಾಲ್ಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ್ ಪಾತ್ರ ಅತಿ ಪ್ರಮುಖವಾಗಿದ್ದು, ಬರ ನಿರ್ವಹಣೆಯಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜತೆ ಸಮನ್ವಯ ಸಭೆ ನಡೆಸುವ ಮೂಲಕ ಕುಡಿಯುವ ನೀರು ಹಾಗೂ ಮೇವಿನ ಕೊರತೆಯ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸದ್ಯ ಮೇವಿನ ಕೊರತೆ ಇರುವುದಿಲ್ಲ. ಮೇವು ಬೇಡಿಕೆ ಇರುವ ಕಡೆಗಳಲ್ಲಿ ಸ್ಥಳೀಯ ಬೇಡಿಕೆಯ ಅನುಸಾರ ಪಶುಪಾಲನಾ ಇಲಾಖೆಯ ಅಧಿಕಾರಿಗಳ ವರದಿ ಆಧರಿಸಿ ಮೇವು ಪೂರೈಕೆ ಮಾಡಲು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಸಂತೋಷ ಕಾಮಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT