ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: SSLC ಪರೀಕ್ಷೆ–2ಗೆ 7,591 ವಿದ್ಯಾರ್ಥಿಗಳು

ಇಂದಿನಿಂದ 22ರ ವರೆಗೆ ಎಸ್‌ಎಸ್‌ಎಲ್‌ಸಿಯ ಎರಡನೇ ಪರೀಕ್ಷೆ: ಸಕಲ ಸಿದ್ಧತೆ
Published 13 ಜೂನ್ 2024, 12:42 IST
Last Updated 13 ಜೂನ್ 2024, 12:42 IST
ಅಕ್ಷರ ಗಾತ್ರ

ಬಳ್ಳಾರಿ: ಇಂದಿನಿಂದ ಜಿಲ್ಲೆಯ 20 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ನಡೆಯಲಿದೆ. ಈ ಪರೀಕ್ಷೆಗೆ ಜಿಲ್ಲೆಯಲ್ಲಿನ ಒಟ್ಟು 310 ಶಾಲೆಗಳ ಹತ್ತನೇ ತರಗತಿಯ 7591 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಪರೀಕ್ಷೆಗಾಗಿ ಅಧಿಕಾರಿಗಳು ಸಕಲ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿಸಲಾಗಿದ್ದು, ಅದರಲ್ಲಿ 2 ಅತಿ ಸೂಕ್ಷ್ಮ, 4–ಸೂಕ್ಷ್ಮ ಕೇಂದ್ರಗಳಾಗಿವೆ. 14 ಸಾಮಾನ್ಯ ಪರೀಕ್ಷಾ ಕೇಂದ್ರಗಳಿವೆ. 338 ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 6 ಅಡಿ ಅಂತರದಲ್ಲಿ ಒಟ್ಟು 3,796 ಡೆಸ್ಕ್‌ಗಳನ್ನು ಹಾಕಿ ಆಸನ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

20 ಪರೀಕ್ಷಾ ಕೇಂದ್ರಗಳಿಗೆ 20 ಮುಖ್ಯ ಅಧೀಕ್ಷಕರು, 20 ಪರೀಕ್ಷಾ ಕೇಂದ್ರಗಳ ಮಾರ್ಗಗಳಿಗೆ 07 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲಿದ್ದಾರೆ. ತಾಲ್ಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಉತ್ತರ ಪತ್ರಿಕೆಗಳನ್ನು ರವಾನಿಸುವ ಸಮಯದಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಲಾಗುತ್ತಿದೆ. 

ಅಧಿಕಾರಿಗಳ ಸಭೆ: ಎಸ್‌ಎಸ್ಎಲ್‌ಸಿ ಪರೀಕ್ಷೆ-2ರ ಪೂರ್ವ ಸಿದ್ದತೆ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ನಡೆಸಲಾಗಿದೆ. ‘ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು’ ಎಂದು ಅವರು ಸೂಚನೆ ನೀಡಿದ್ದಾರೆ. 

ಮಾರ್ಗಾಧಿಕಾರಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಾಗ್ರಿ ತಲುಪಿಸಲು 7 ವಾಹನ ಒದಗಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಪರೀಕ್ಷೆ ವೇಳೆಯಲ್ಲಿ ತುರ್ತು ಚಿಕಿತ್ಸೆ ಸಂಬಂಧ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. 

ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಸಾರಿಗೆ ವ್ಯವಸ್ಥೆ, ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಒದಗಿಸಬೇಕು. ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಲು 20 ಕ್ಯಾಂಪ್ ಕಸ್ಟೊಡಿಯನ್, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಿಇಒ ತಿಳಿಸಿದ್ದಾರೆ. 

‘ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೆಕು. ಮಂಡಳಿಯ ಸುತ್ತೋಲೆಯ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು‘ ಎಂದು  ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. 

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ, ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕ ಎ.ಕೆ. ಸತ್ಯನಾರಾಯಣ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT