ಹೊಸಪೇಟೆ (ವಿಜಯನಗರ): ‘ಮಹಿಳೆಯರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸುಧಾರಣೆ ಬಹಳ ಅತ್ಯಗತ್ಯವಾಗಿದ್ದು, ಇದಕ್ಕೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಜಂಟಿ ಕಾರ್ಯದರ್ಶಿ ಅಶೋಲಿ ಚಲೈ ತಿಳಿಸಿದರು.
ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಂಭಾಗಣದಲ್ಲಿ ಮಹಿಳಾ ಅಧ್ಯಯನ ವಿಭಾಗ ಮತ್ತು ಕೇಂದ್ರ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಸಹಭಾಗಿತ್ವದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರ ಮೇಲೆ ದೈಹಿಕ, ಮಾನಸಿಕ ಹಾಗೂ ಬೌದ್ಧಿಕವಾಗಿ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಮಹಿಳಾ ಸಮಾನತೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅವರ ಸ್ಥಿತಿಗತಿ ಸುಧಾರಣೆಗೂ ಸರ್ಕಾರ ಒತ್ತು ಕೊಡಬೇಕು. ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯದ ಎಲ್ಲ ಮಹಿಳಾ ಆಯೋಗಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿದ್ದು, ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆರ್., ಮಾತನಾಡಿ, ವಿದ್ಯೆ ಮತ್ತು ಸ್ವಾವಲಂಬನೆ ಮಹಿಳೆಯರ ಮೊದಲ ಆದ್ಯತೆಯಾಗಬೇಕು. ಆಗ ಮಹಿಳೆಯರು ಸ್ವಾಭಿಮಾನಿಗಳಾಗಿ ಬದುಕಲು ನೆರವಾಗುತ್ತದೆ ಎಂದರು.
ಲಿಂಗ ಸಮಾನತೆಗೆ ಒತ್ತು ಕೊಟ್ಟು ಬದಲಾವಣೆ ತರುವ ನಿಟ್ಟಿನಲ್ಲಿ ಸರ್ಕಾರದಿಂದ ಹಲವು ರೀತಿಯ ಕಾನೂನು ಜಾರಿಗೆ ತರಲಾಗಿದೆ. ಮಹಿಳಾ ಸಮಾನತೆಗೆ ಹೋರಾಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ಮಹಿಳಾ ಆಯೋಗವು ಮಹಿಳೆಯರಿಗೆ ನ್ಯಾಯ ಒದಗಿಸಿ ಅವರನ್ನು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುತ್ತಿದೆ ಎಂದು ಹೇಳಿದರು.
‘ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ– ಕಾನೂನು’ ಕುರಿತು ವಕೀಲೆ ಭಾಗ್ಯಲಕ್ಷ್ಮಿ ಭರಾಡೆ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಪ್ರೀತಿ, ಪ್ರೇಮ, ಉದ್ಯೋಗದ ಆಮಿಷಗಳಿಗೆ ಒಳಗಾಗಿ ಮಹಿಳೆಯರು ನಾಪತ್ತೆಯಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಕಳ್ಳ ಸಾಗಾಣಿಕೆಯೂ ಹೆಚ್ಚಾಗಿದೆ. ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟಲು ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಅರಿವು ಮೂಡಿಸಿ ತಡೆಯಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಭಾರತೀಯ ಸಂಸ್ಕೃತಿ, ಸಮಾಜ ನಂಬಿಕೆಯ ತಳಹದಿಯ ಮೇಲೆ ನಿಂತಿದೆ. ಮಾನವನ ದುರಾಸೆಯೇ ಅಕ್ರಮ ಚಟುವಟಿಕೆಗಳಿಗೆ ಮೂಲ ಕಾರಣ. ಯುವಕ-ಯುವತಿಯರು ಆಮಿಷಗಳಿಗೆ ಒಳಗಾಗಿ ತಮ್ಮ ಸುಂದರ ಜೀವನವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಮಹಿಳಾ ಕಾನೂನಿನ ಬಗ್ಗೆ ಶಾಲಾ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕಾರ್ಯಕ್ರಮ ಏರ್ಪಡಿಸಿ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ, ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಶಿವಾನಂದ ಎಸ್. ವಿರಕ್ತಮಠ, ಅಧ್ಯಾಪಕ ಯರ್ರಿಸ್ವಾಮಿ, ವಕೀಲ ಕರುಣಾನಿಧಿ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.