ಹೊಸಪೇಟೆ (ವಿಜಯನಗರ): ‘ಮಾ. 31ರಿಂದ ಏ. 15ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ವಿಜಯನಗರ ಜಿಲ್ಲೆಯಲ್ಲಿ ಒಟ್ಟು 21,934 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಒಟ್ಟು 327 ಶಾಲೆಗಳಲ್ಲಿ ಪರೀಕ್ಷೆಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 40 ಸರ್ಕಾರಿ, 20 ಅನುದಾನಿತ ಹಾಗೂ 13 ಅನುದಾನ ರಹಿತ ಶಾಲೆಗಳಿದ್ದು, ಒಟ್ಟು 73 ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದೆ. 34 ನಗರ ಹಾಗೂ 39 ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಸೂಪರಿಟೆಂಡೆಂಟ್ ಸೇರಿದಂತೆ 18 ಉಪ ಮುಖ್ಯ ಸೂಪರಿಟೆಂಡೆಂಟ್‌ಗಳು ಕಾರ್ಯನಿರ್ವಹಿಸುವರು ಎಂದರು.
4 ಹೊಸ ಪರೀಕ್ಷಾ ಕೇಂದ್ರ ಆರಂಭ:
ಪ್ರಸಕ್ತ ಸಾಲಿನಲ್ಲಿ ನಾಲ್ಕು ಹೊಸ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಹೊಸಪೇಟೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಡಣಾಪುರ ಸರ್ಕಾರಿ ಪ್ರೌಢಶಾಲೆ, ಕೂಡ್ಲಿಗಿ ತಾಲ್ಲೂಕಿನ ಕೋಗಳಿಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ತಾಯಕನಹಳ್ಳಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯಲಿವೆ.
ಪರೀಕ್ಷೆಗೆ ಪ್ರವೇಶ ಪತ್ರ ಪಡೆಯದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಒದಗಿಸಬೇಕು. ಜೊತೆಗೆ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದ ರೀತಿಯಲ್ಲಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸಿ ಮಾರ್ಗಸೂಚಿಗಳನ್ವಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯ ವ್ಯವಸ್ಥೆ, ಕೊಠಡಿ ನಿರ್ವಹಣೆ, ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಪ್ರಶ್ನೆ ಪತ್ರಿಕೆಗಳ ಸರಬರಾಜು, ಸಾರಿಗೆ ವ್ಯವಸ್ಥೆ ಸರಿಯಾಗಿ ಮಾಡಬೇಕು. ಉತ್ತರ ಪತ್ರಿಕೆಗಳನ್ನು ಶಾಲೆಗೆ ಸಾಗಿಸುವ ವೇಳೆ ಹಾಗೂ ಪರೀಕ್ಷಾ ಸಮಯದಲ್ಲಿ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವ ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಜಿ. ಕೊಟ್ರೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ(ಅಭಿವೃದ್ಧಿ) ಉಪನಿರ್ದೇಶಕ ಹನುಮಕ್ಕ, ಉಪವಿಭಾಗಧಿಕಾರಿ ಸಿದ್ದರಾಮೇಶ್ವರ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.