ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17 ಬಾಲ್ಯವಿವಾಹ ಪ್ರಕರಣ ದಾಖಲು

ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಸಿ: ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಸೂಚನೆ
Last Updated 22 ಜುಲೈ 2021, 4:03 IST
ಅಕ್ಷರ ಗಾತ್ರ

ದೇವನಹಳ್ಳಿ:ರಕ್ತಹೀನತೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಟಿಕ ಆಹಾರ ನೀಡುವ ಮೂಲಕ ಅವರನ್ನು ಸದೃಢರನ್ನಾಗಿ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.

ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ, 2006ರ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವುದರಿಂದ ಅವರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006ರಡಿ ಏಪ್ರಿಲ್‌ನಿಂದ ಜೂನ್ ಅಂತ್ಯಕ್ಕೆ ಒಟ್ಟು 17 ಪ್ರಕರಣ ದಾಖಲಾಗಿವೆ. ಈ ಪೈಕಿ ದೊಡ್ಡಬಳ್ಳಾಪುರದಲ್ಲಿ 7, ದೇವನಹಳ್ಳಿ 5, ಹೊಸಕೋಟೆಯಲ್ಲಿ 4 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ. ಒಂದು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಾಲ್ಯವಿವಾಹ ಕುರಿತಂತೆ ಪೋಷಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೌಟುಂಬಿಕ ಹಿಂಸೆಯಿಂದ ನೊಂದ ಮಹಿಳೆಯರಿಗೆ ಕೌನ್ಸೆಲಿಂಗ್ ಮೂಲಕ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ನೊಂದ ಮಹಿಳೆಗೆ ಸೂಕ್ತ ನ್ಯಾಯ ಮತ್ತು ಮಾರ್ಗದರ್ಶನ ನೀಡಬೇಕು. ಸಖಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಕಟ್ಟಡವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಮಾತನಾಡಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005ರಡಿ ನಿಯಮ 2006ರ, ಸಖಿ ಯೋಜನೆಯಡಿ ದಾಖಲಾದ 18 ಪ್ರಕರಣಗಳು ಹಾಗೂ ಸಾಂತ್ವನ ಕೇಂದ್ರಗಳಲ್ಲಿ 46 ಪ್ರಕರಣಗಳನ್ನು ಸೂಕ್ತ ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಒಟ್ಟು 21,320 ಫಲಾನುಭವಿಗಳಿಗೆ ಮೂರು ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ತಲಾ ₹ 5 ಸಾವಿರ ಜಮೆ ಮಾಡಲಾಗಿದೆ. ಆಹಾರ ಧಾನ್ಯ ತಲುಪಿಸಲು ಯಂತ್ರಗಳ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಯ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಾಧಿಕಾರಿ ವೆಂಕಟೇಶ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ, ಹಿರಿಯ ವೈದ್ಯಾಧಿಕಾರಿ ಶ್ರೀನಿವಾಸ್, ಮಾರ್ಗದರ್ಶಿ ಬ್ಯಾಂಕಿನ ಯೋಜನಾ ವ್ಯವಸ್ಥಾಪಕ ಮಂಜುನಾಥ್, ತಾಲ್ಲೂಕು ಮಟ್ಟದ ಶಿಶು ಯೋಜನಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT