ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ | ಪ್ರತಿ ಕ್ವಿಂಟಾಲ್‌‌ ರಾಗಿಗೆ ₹3,846 ನಿಗದಿ: ಜಿಲ್ಲಾಧಿಕಾರಿ

Published 23 ನವೆಂಬರ್ 2023, 5:40 IST
Last Updated 23 ನವೆಂಬರ್ 2023, 5:40 IST
ಅಕ್ಷರ ಗಾತ್ರ

ದೇವನಹಳ್ಳಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿ.1 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ  ಎನ್. ಶಿವಶಂಕರ್ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಬೀರಸಂದ್ರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ ₹3,846 ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಗ್ರಹ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರ ತೆರೆಯಬೇಕು. ಈ ಸಂಬಂಧ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳ ಗುರುತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ನೋಂದಣಿಗೆ ಸಮಸ್ಯೆ ಆಗದಂತೆ ತಾಂತ್ರಿಕ ವ್ಯವಸ್ಥೆಯ‌ನ್ನು ಸಜ್ಜುಗೊಳಿಸಬೇಕು. ಜತೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲ ಸೌಕರ್ಯ ಕಲ್ಪಿಸಿ, ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ ಎಂದು ಹೇಳಿದರು.

ರೈತರಿಂದ ಖರೀದಿಸಿದ ಧಾನ್ಯ ಕ್ರೋಢೀಕರಿಸಿ ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.

2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಹೇಳಿದರು.

ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ‌.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ, ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಎಚ್‌.ಟಿ. ಶೋಭಾ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT