ಶುಕ್ರವಾರ, ಜೂನ್ 18, 2021
24 °C
ನಾಲ್ವರ ಸಾವು ಪ್ರಕರಣಕ್ಕೆ ಗಿಡ್ಡಪ್ಪನಹಳ್ಳಿ ಗ್ರಾಮಸ್ಥರ ಆಕ್ರೋಶ

ಪಂಚಾಯಿತಿಯಲ್ಲೇ ಆಧಾರ್ ನೋಂದಣಿ– ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಲಿಬೆಲೆ: ಆಧಾರ್ ಕಾರ್ಡ್ ಮಾಡಿಸಲು ಹೋಗಿ ನಾಲ್ವರು ಪ್ರಾಣ ಕಳೆದುಕೊಳ್ಳುವಂತಾಯಿತು. ಆಧಾರ್ ನೋಂದಣಿ ಮತ್ತು ತಿದ್ದುಪಡಿಯನ್ನು ಗ್ರಾಮ ಪಂಚಾಯಿತಿಗಳಲ್ಲಿಯೇ ಪ್ರತ್ಯೇಕ ಕೇಂದ್ರಗಳನ್ನು ತೆರೆದು ಜನರಿಗೆ ಅನುಕೂಲ ಮಾಡಬೇಕು. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದ ಎರಡು ಕುಟುಂಬಗಳು ದೇವನಹಳ್ಳಿ ಬಳಿ ಆಧಾರ್ ಮಾಡಿಸಲು ಹೋಗುವಾಗ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಕಛೇರಿ ಮುಂದೆ ಸೇರಿ ‘ನ್ಯಾಯ ಬೇಕು’ ಘೋಷಣೆ ಕೂಗಿ ಪ್ರತಿಭಟನೆಯ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕೆಲವು ತಿಂಗಳುಗಳ ಹಿಂದೆ ಗ್ರಾಮ ಪಂಚಾಯಿತಿಗಳಲ್ಲಿಯೇ ಆಧಾರ್ ತಿದ್ದುಪಡಿ ಮಾಡಿಕೊಡಲಾಗುತ್ತಿತ್ತು. ಆರು ತಿಂಗಳುಗಳಿಂದ ತಿದ್ದುಪಡಿ ಸೇರಿದಂತೆ ಆಧಾರ್ ಗೆ ಸಂಬಂಧಿಸಿದ ಯಾವುದೇ ಕೆಲಸವಾಗುತ್ತಿಲ್ಲ. ಆಗಸ್ಟ್ ತಿಂಗಳ ಒಳಗೆ ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರು ಬಯೋಮೆಟ್ರಿಕ್ ನೀಡಬೇಕು; ತಪ್ಪಿದಲ್ಲಿ ಆಗಸ್ಟ್ ತಿಂಗಳಿನಿಂದ ಪಡಿತರ ನಿಲ್ಲಿಸಲಾಗುವುದು, ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡಿನಲ್ಲಿ ಬಯೋಮೆಟ್ರಿಕ್ ಅಪ್‌ಡೇಟ್‌ಗಾಗಿ ಜನರು ಕಂಡ ಕಂಡ ಕಡೆ ಅಲೆಯುತ್ತಿದ್ದಾರೆ ಎಂದು ವಿವರಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ತಿದ್ದುಪಡಿ ಸ್ಥಗಿತಗೊಂಡಿದೆ. ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗಬೇಕಾಯಿತು ಎಂದು ಆಕ್ರೋಶಗೊಂಡ ಗ್ರಾಮಸ್ಥರು ನ್ಯಾಯಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ರಮೇಶ್, ‘ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಲಾಗಿನ್ ವರ್ಕ್ ಆಗುತ್ತಿಲ್ಲ. ಕುಟುಂಬಸ್ಥರನ್ನು ಕಳೆದುಕೊಂಡವರ ನೋವಿನಲ್ಲಿ ನಾವು ಕೂಡ ಭಾಗಿಯಾಗಿದ್ದೇವೆ. ಗ್ರಾಮ ಪಂಚಾಯಿತಿಯಿಂದ ಸರ್ಕಾರಕ್ಕೆ ಪತ್ರ ಬರೆದು ಶೀಘ್ರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸಲಾಗುವುದು. ಜನರ ಹಿತ ಕಾಪಾಡಲು ಗ್ರಾಮ ಪಂಚಾಯಿತಿ ಬದ್ಧವಾಗಿದ್ದು, ನಿಮ್ಮೊಟ್ಟಿಗೆ ನಾನು ಕೂಡ ಹೋರಾಟದಲ್ಲಿ ಭಾಗಿಯಾಗುತ್ತೇನೆ’ ಎಂದು ಸಮಧಾನ ಪಡಿಸಿದರು. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು