ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಗ್ಗುವಾರಿಪಲ್ಲಿ ಸಮೀಪ ಶನಿವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಕಂಟನಕುಂಟೆ ಗ್ರಾಮದ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.
ಕಂಟನಕುಂಟೆಯಿಂದ ತಿರುಪತಿಗೆ ಹೊರಟಿದ್ದ ಕಾರಿನ ಟೈರ್ ಸ್ಫೋಟಗೊಂಡು ಬೆಂಗಳೂರು-ಚನ್ನೈ ರಾಷ್ಟ್ರೀಯ ಹೆದ್ದಾರಿಯ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ಕಂಟನಕುಂಟೆ ಗ್ರಾಮದ ಗಂಗರಾಜು(50), ಲಕ್ಷ್ಮಿ(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶ್ರೀನಿವಾಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಎಲ್ಲರನ್ನೂ ಕೋಲಾರದ ಆರ್.ಎಲ್.ಜಾಲಪ್ಪ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಮತ್ತು ಗಾಯಾಳುಗಳು ಸಂಬಂಧಿಗಳಾಗಿದ್ದು ತಿರುಪತಿ ಸಮೀಪದ ಸಂಬಂಧಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದಿನ ಟೈರ್ ಸ್ಫೋಟಗೊಂಡಿದ್ದರಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಕಾರು ಚಾಲನೆ ಮಾಡುತ್ತಿದ್ದ ಗಂಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಸಂಬಂಧಿಗಳು ತಿಳಿಸಿದ್ದಾರೆ. ಗಂಗರಾಜು ಅಂತ್ಯಕ್ರಿಯೆ ಭಾನುವಾರ ಕಂಟನಕುಂಟೆ ಗ್ರಾಮದಲ್ಲಿ ಹಾಗೂ ಲಕ್ಷ್ಮಿ ಅಂತ್ಯಕ್ರಿಯೆ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆಯಲಿದೆ.
ಬೆಂಗಳೂರು– ಚಿತ್ತೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಹಾಗೂ ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದರು. ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.