ಭಾನುವಾರ, ಜುಲೈ 3, 2022
24 °C
ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ತರಾಟೆ

ಕಾಲಮಿತಿಯೊಳಗೆ ಗುರಿ ಸಾಧನೆಗೆ ತಾಕೀತು: ಎ. ಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಇಲ್ಲಿನ ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎ.ಪ್ರಸಾದ್ ವಿವಿಧ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಭೆ ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ, ತಾಲ್ಲೂಕಿನ ಮಲ್ಲೇನಹಳ್ಳಿ ಬಳಿ ಇರುವ ರೇಷ್ಮೆ ಇಲಾಖೆ ವಸತಿ ಗೃಹ ಆವರಣದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿದ್ದು ಪೊಲೀಸ್ ಠಾಣೆಗೆ ದೂರು ನೀಡಿ ತೆರವುಗೊಳಿಸಲಾಗುವುದೆಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪ್ರಸಾದ್ ಮಾತನಾಡಿ, ಸೆಪ್ಟಂಬರ್ ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದ್ದೇನು, ಮಾಡಿರುವುದೇನು? ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದರೆ ವ್ಯಕ್ತಿ ಪ್ರಭಾವಿಯೇ ‌ಇರಬೇಕು. ನೀವು ಯಾವ ಕ್ರಮಕೈಗೊಂಡಿದ್ದೀರಿ ಎಂದು ಅಧಿಕಾರಿ ವಿರುದ್ಧ ಕಿಡಿಕಾರಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕುಮಾರ್ ಮಾತನಾಡಿ, ಸರ್ಕಾರಿ ಸ್ವತ್ತು ಕಬಳಿಸಿದವರಿಗೆ ಯಾವ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂಬುದು ನಿಮಗೆ ಗೊತ್ತಿದೆಯೇ ? ಸಬೂಬು ಹೇಳಿಕೊಂಡು ಕಾಲಹರಣ ಮಾಡುವುದಲ್ಲ ಎಂದು ತಾಕೀತು ಮಾಡಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಯೋಜನೆ ಸಹಾಯಕ ನಿರ್ದೇಶಕಿ ಸವಿತಾ ಮಾಹಿತಿ ನೀಡಿ, ಜಿಲ್ಲೆಯಲ್ಲಿ 680 ಶುದ್ಧ ಕುಡಿಯುವ ನೀರಿನ ಘಟಕ ಪೈಕಿ 7 ರಿಪೇರಿಯಾಗಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ ಮಾಹಿತಿ ನೀಡಿ, ಪ್ರಸ್ತುತ ಜಿಲ್ಲೆಯಲ್ಲಿ 1.55.365 ವಿದ್ಯಾರ್ಥಿಗಳು ಆನ್ ಲೈನ್‌ ನಲ್ಲಿ ದಾಖಲಾಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿದೆ ಎಂದು ಹೇಳಿದರು.

ಸಿಇಒ ರವಿಕುಮಾರ್ ಮಾತನಾಡಿ, ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಶೇ11 ರಷ್ಟು ದಾಖಲಾತಿಯಲ್ಲಿ ಹೆಚ್ಚಳವಾಗಿದೆ. ಸರ್ಕಾರಿ ಶಾಲೆಗಳ ಸ್ವತ್ತುಗಳನ್ನು ಇ –ಸ್ವತ್ತು ಮಾಡಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪುಷ್ಪಲತಾ ರಾಯ್ಕರ್‌ ಮಾಹಿತಿ ನೀಡಿ, 250 ಅಂಗನವಾಡಿಗಳ ಪೈಕಿ 50 ಅಂಗನವಾಡಿಗಳಿಗೆ ಕಿಚನ್ ಗಾರ್ಡನ್ ಗೆ ಮಾತ್ರ 750 ಸಸಿಗಳನ್ನು ತೋಟಗಾರಿಕೆ ಇಲಾಖೆ ನೀಡಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಇಲಾಖೆಗಳಲ್ಲಿ ಏನಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಮೂರು ದಿನಗಳಲ್ಲಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಕಿಚನ್‌ ಗಾರ್ಡನ್ ಮಾಡಬೇಕು ಎಂದು  ತಾಕೀತು ಮಾಡಿದರು.

ಸಿಇಒ ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿ, ಪಿ.ಯು ಕಾಲೇಜು ಕಟ್ಟಡಗಳಿಗೆ ಮಳೆ ನೀರು ಸಂಗ್ರಹ ಪದ್ಧತಿ ಕಡ್ಡಾಯವಾಗಿ ಅಳವಡಿಸಬೇಕು. ಪ್ರತಿಯೊಂದು ಕೃಷಿ ಹೊಂಡಗಳಿಗೆ ಮುಳ್ಳಿನ ತಂತಿ ಬೇಲಿ ಅಳವಡಿಸಿಕೊಳ್ಳುವಂತೆ ಕೃಷಿ ಅಧಿಕಾರಿಗಳು ರೈತರಿಗೆ ಸೂಚಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪಾ ಮರಿಯಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಯೊಜನಾಧಿಕಾರಿ ವಿನುತಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು