ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಚುನಾವಣೆ: ಆನೇಕಲ್‌ ತಾಲ್ಲೂಕು ನಿರ್ಣಾಯಕ

Last Updated 8 ಡಿಸೆಂಬರ್ 2021, 21:47 IST
ಅಕ್ಷರ ಗಾತ್ರ

ಆನೇಕಲ್:ಬೆಂಗಳೂರು ನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಒಟ್ಟು 2,073 ಮತದಾರರಿದ್ದಾರೆ. ಈ ಪೈಕಿ ತಾಲ್ಲೂಕಿನಲ್ಲಿ 849 ಮತದಾರರಿದ್ದು, ಚುನಾವಣೆಯಲ್ಲಿ ಆನೇಕಲ್‌ ತಾಲ್ಲೂಕು ನಿರ್ಣಾಯಕವಾಗಿದೆ.

ಈ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ ಮತ್ತು ಕಾಂಗ್ರೆಸ್‌ ಮುಖಂಡರು ಎಲ್ಲಾ ರೀತಿಯ ಪ್ರಯತ್ನ ಮಾಡಿ ಮತದಾರರನ್ನು ಸೆಳೆಯುವಲ್ಲಿ ನಿರತರಾಗಿದ್ದಾರೆ.

ಕ್ಷೇತ್ರದಲ್ಲಿ ಪ್ರಾರಂಭದಿಂದಲೂ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ತಂತ್ರಗಳನ್ನು ರೂಪಿಸಿದರೆ, ಆಡಳಿತರೂಢ ಬಿಜೆಪಿ ಈ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಮಲ ಅರಳಿಸಲು ತನ್ನೆಲ್ಲಾ ಬಲವನ್ನು ಕ್ರೋಡೀಕರಿಸಿದೆ.

ಬಿಜೆಪಿ ಅಭ್ಯರ್ಥಿ ಎಚ್‌.ಎಸ್‌. ಗೋಪಿನಾಥ್‌ ಪರವಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದಾರೆ. ಆನೇಕಲ್‌ನವರೇ ಆದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಮ್ಮ ಬೆಂಬಲಿಗರು ಮತ್ತು ಕಾರ್ಯಕರ್ತರ ಮೂಲಕ ಮತದಾರರನ್ನು ಸೆಳೆಯವಲ್ಲಿ ನಿರತರಾಗಿದ್ದಾರೆ. ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ, ಶಾಸಕರಾದ ಎಂ. ಕೃಷ್ಣಪ್ಪ, ಸತೀಶ್‌ ರೆಡ್ಡಿ, ವಿಧಾನ ಪರಿಷತ್‌ ಸದಸ್ಯ ತುಳಸಿ ಮುನಿರಾಜು ಸೇರಿದಂತೆ ಹಲವು ಮುಖಂಡರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಕಾಂಗ್ರೆಸ್‌ ಅಭ್ಯರ್ಥಿ ಯುಸೂಪ್‌ ಷರೀಫ್‌ ಅವರ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್‌, ಶಾಸಕ ಬಿ. ಶಿವಣ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಗೆಲುವಿಗಾಗಿ ತಮ್ಮದೇ ಆದ ತಂತ್ರ ರೂಪಿಸಿದ್ದಾರೆ. ಕ್ಷೇತ್ರವನ್ನು ಪಕ್ಷದ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಯ ಬಹಿರಂಗ ಪ್ರಚಾರ ಪೂರ್ಣಗೊಂಡಿದ್ದು, ಮತದಾರರನ್ನು ನೇರ ಭೇಟಿ ಮಾಡುವ ಕೊನೆ ಹಂತದ ಕಾರ್ಯಾಚರಣೆಯಲ್ಲಿ ಮುಖಂಡರು ತೊಡಗಿಕೊಂಡಿದ್ದಾರೆ.

ಆನೇಕಲ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 21 ಗ್ರಾಮ ಪಂಚಾಯಿತಿಗಳು ಮತ್ತು 3 ಪುರಸಭೆಗಳಿವೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ 7 ಗ್ರಾಮ ಪಂಚಾಯಿತಿಗಳು ಬರಲಿವೆ. ಆನೇಕಲ್‌ನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶಾಸಕರಿದ್ದಾರೆ.

ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಪುರಸಭೆಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ನೆರಳೂರು ಗ್ರಾಮ ಪಂಚಾಯಿತಿಯಲ್ಲಿ 63 ಮತದಾರರಿದ್ದು, ತಾಲ್ಲೂಕಿನಲ್ಲಿ ಅತ್ಯಂತ ಹೆಚ್ಚು ಮತದಾರಿರುವ ಮತಗಟ್ಟೆಯಾಗಿದೆ. ರಾಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 8 ಮಂದಿ ಸದಸ್ಯರಿದ್ದು, ತಾಲ್ಲೂಕಿನಲ್ಲಿ ಅತ್ಯಂತ ಕಡಿಮೆ ಮತದಾರರಿರುವ ಮತಗಟ್ಟೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT