ಗುರುವಾರ, 7 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅರಿವಿದೆ: ಶರತ್ ಬಚ್ಚೇಗೌಡ

Published 31 ಮೇ 2023, 15:57 IST
Last Updated 31 ಮೇ 2023, 15:57 IST
ಅಕ್ಷರ ಗಾತ್ರ

ಹೊಸಕೋಟೆ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಎದುರಿಸುವ ಸಮಸ್ಯೆಗಳ ಕುರಿತು ನನಗೆ ಅರಿವಿದೆ. ಈ ಸವಾಲುಗಳ ನಡುವೆ ಎಲ್ಲ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆ ಅದ್ವಿತೀಯವಾದದ್ದು ಎಂದು ಶಾಸಕ ಶರತ್ ಬಚ್ಚೇಗೌಡ ಅವರು ಅಭಿಪ್ರಾಯಪಟ್ಟರು. 

ಜಿಕೆಬಿಎಂಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2023–24ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಪೋಷಕರಾಗಿ ಕೆಲಸ ಮಾಡಬೇಕಿದೆ. ಸಾಮಾಜಿಕ, ಆರ್ಥಿಕ, ಬೌದ್ಧಿಕ, ಶೈಕ್ಷಣಿಕವಾಗಿ ಹಿಂದುಳಿದಿರುವುದು ಹಾಗೂ ಪೋಷಕರಿಂದ ನಿರ್ಲಕ್ಷ್ಯಕ್ಕೆ ಒಳಗಾದ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡುವ ಮೂಲಕ ಅವರ ಭವಿಷ್ಯ ರೂಪಿಸುವ ಜಬಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಆರ್ಥಿಕ ಹೊರೆಯಾದರೂ ಅತ್ತ ಮುಖ ಮಾಡುವ ಪೋಷಕರಿಗೆ ಅರಿವು ಮೂಡಿಸಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತೆ ಗಮನ ಸೆಳೆಯುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ತಾಲ್ಲೂಕಿನ 267 ಶಾಲೆಗಳಲ್ಲಿಯೂ ಪ್ರಾರಂಭೋತ್ಸವ ಕಾರ್ಯಕ್ರಮ ಮಾಡುತ್ತಿರುವ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಅಭಿನಂದನೆ ಎಂದರು.

ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ

ಜಿಕೆಬಿಎಂಎಸ್ ಶಾಲೆಗೆ ಕೆಲವೊಂದು ಬೇಡಿಕೆಗಳಿದ್ದು ಅದರಲ್ಲಿ ಮುಖ್ಯವಾಗಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ, ಶಾಲೆಯ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶಾಲೆಗೆ ಸೂಕ್ತ ಕಾಂಪೌಂಡ್, ಸಾರ್ವಜನಿಕರ ಓಡಾಟದಿಂದ ಮಕ್ಕಳಿಗೆ ಆಗುತ್ತಿರುವ ತೊಂದರೆ ಸರಿಪಡಿಸಲಾಗುವುದು, ಶಾಲಾ ಕೊಠಡಿಗಳ ಕೊರತೆ ನೀಗಿಸಲು ಯೋಜನೆ ರೂಪಿಸಲಾಗುವುದು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖಂಡರು, ಎಸ್‌ಡಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೊಸಕೋಟೆ ನಗರದ ಜಿಕೆಬಿಎಂಎಸ್ ಶಾಲೆಯಲ್ಲಿ 2023–24ರ ಶಾಲಾ ಪ್ರಾರಂಭೋತ್ಸವ ಸಮಾರಂಭವನ್ನು ಶಾಸಕ ಶರತ್ ಬಚ್ಚೇಗೌಡ ಅವರು ಮಕ್ಕಳೊಂದಿಗೆ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು
ಹೊಸಕೋಟೆ ನಗರದ ಜಿಕೆಬಿಎಂಎಸ್ ಶಾಲೆಯಲ್ಲಿ 2023–24ರ ಶಾಲಾ ಪ್ರಾರಂಭೋತ್ಸವ ಸಮಾರಂಭವನ್ನು ಶಾಸಕ ಶರತ್ ಬಚ್ಚೇಗೌಡ ಅವರು ಮಕ್ಕಳೊಂದಿಗೆ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT