ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ’

ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೂಚನಾ ಫಲಕ ಅಳವಡಿಸಲು ಸಲಹೆ, ನಿಯಮ ಉಲ್ಲಂಘನೆಗೆ ದಂಡ ವಿಧಿಸಲು ಸೂಚನೆ
Last Updated 14 ನವೆಂಬರ್ 2019, 13:10 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಂಬಾಕು ಸೇವನೆಯಿಂದ ಮಾರಾಣಾಂತಿಕ ಕಾಯಿಲೆ, ಗರ್ಭಪಾತ, ಗರ್ಭಧಾರಣೆಯಲ್ಲಿ ಕುಂಠಿತ, ದಂತಕ್ಷಯ ಸೇರಿದಂತೆ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕ್ರಮ ಬದ್ಧವಾಗಿ ಶಿಬಿರಗಳನ್ನು ಜಿಲ್ಲೆಯಲ್ಲಿ ಏರ್ಪಡಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

‘2003ರ ಕೋಟ್ಪಾ ಕಾಯ್ದೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೆಕ್ಷನ್ 4 ಮತ್ತು 6 ಬಿ ಅನ್ವಯ ಶಾಲೆ ಮುಖ್ಯ ಪ್ರವೇಶ ದ್ವಾರಗಳಲ್ಲಿ ‌‘ತಂಬಾಕು ಮುಕ್ತ ಶಾಲೆ ಮತ್ತು ತಂಬಾಕು ಸೇವನೆ ನಿಷಿದ್ಧ’ ಎಂದು ಸೂಚಿಸುವ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಬಸ್ ನಿಲ್ದಾಣ, ರೈಲು ನಿಲ್ದಾಣ, ಶಾಲಾ-ಕಾಲೇಜು ಆವರಣ ಮತ್ತು ಸರ್ಕಾರಿ ಕಚೇರಿ ಆವರಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧ. ಉಲ್ಲಂಘನೆ ಮಾಡುವವರಿಗೆ ₹ 200 ರವರೆಗೆ ಕಡ್ಡಾಯವಾಗಿ ದಂಡ ವಿಧಿಸಬೇಕು’ ಎಂದರು.

‘ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ, ಕೈಗಾರಿಕಾ ಕಾರ್ಮಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶ್ವಾಸಕೋಶ ಸಂಬಂಧಿತ ಕ್ಷಯ (ಟಿ.ಬಿ) ಆರೋಗ್ಯ ತಪಾಸಣಾ ಕಾರ್ಯಕ್ರಮ ಏರ್ಪಡಿಸಿ ಪ್ರಾಥಮಿಕ ಹಂತದ ಕಫ ಪರೀಕ್ಷೆ ನಡೆಸಿ ಕ್ಷಯ ಕಾಯಿಲೆಯ ಗುಣ ಲಕ್ಷಣಗಳು ಕಂಡು ಬಂದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಿ ಶೀಘ್ರವಾಗಿ ಗುಣಪಡಿಸಬೇಕು’ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗೆ ತಿಳಿಸಿದರು.

ಬೆಂಗಳೂರು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT