ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕ ಸಮರ ಸನಿಹ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಶರವೇಗ

ಸಂದೀಪ್‌
Published 6 ಮಾರ್ಚ್ 2024, 6:24 IST
Last Updated 6 ಮಾರ್ಚ್ 2024, 6:24 IST
ಅಕ್ಷರ ಗಾತ್ರ

ದೇವನಹಳ್ಳಿ: ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ನೀತಿ ಸಂಹಿತೆ ಜಾರಿಯಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೂರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡುವ ವೇದಿಕೆ ಕಾರ್ಯಕ್ರಮದ ಸಿದ್ಧತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ನಿರತರಾಗಿದ್ದಾರೆ.

ಈಗಾಗಲೇ ಮಾ.4ರಂದು ನೆಲಮಂಗಲ ತಾಲ್ಲೂಕಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ₹850ಕೋಟಿ ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮಾ.10ರಂದು ಹೊಸಕೋಟೆ ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಬಹುಕೋಟಿ ವೆಚ್ಚದ ಕಾಮಗಾರಿ ಭೂಮಿ ಪೂಜೆ ನೇರವೇರಿಸಲು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಗಮಿಸಲಿದ್ದಾರೆ.

ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾ.11ರಂದು ದೇವನಹಳ್ಳಿ ನಗರದಲ್ಲಿಯೂ ಬಹುಕೋಟಿ ಕಾಮಗಾರಿಗಳಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ ನಡೆಸಲಾಗಿದೆ.

ಸಚಿವ ಕೆ.ಎಚ್‌.ಮುನಿಯಪ್ಪ ಸರ್ಕಾರದ ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳ ಪ್ರಚಾರಕ್ಕೆ ಭರ್ಜರಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯ 4 ವಿಧಾನಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುತ್ತಿರುವುದು ಇದೇ ಮೊದಲು. ಈ ಮೂರು ತಾಲ್ಲೂಕಿನಲ್ಲಿಯೂ ಕಾಂಗ್ರೆಸ್‌ ಶಾಸಕರಿರುವುದು ವಿಶೇಷ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿ ರಕ್ಷಾ ರಾಮಯ್ಯ ಸಾಮಾಜಿಕ ಮಾಧ್ಯಮ ಮೂಲಕ  ಪ್ರಚಾರದಲ್ಲಿ ತೊಡಗಿದ್ದಾರೆ. ವೀರಪ್ಪ ಮೊಯಿಲಿ ಅವರು ತಮ್ಮ ಕೃತಿ ಬಿಡುಗಡೆ ಮೂಲಕ ಕಾರ್ಯಕರ್ತರನ್ನು ಈಗಾಗಲೇ ಒಂದೆಡೆ ಸೇರಿಸಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.  

ಇನ್ನೂ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಶಾಸಕರಿದ್ದರೂ ಅಲ್ಲಿಯೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೂರಾರು ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ ಎನ್ನುತ್ತಾರೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು.

ಶರತ್‌ ನಾಯಕತ್ವದಲ್ಲಿ ಭರದ ಸಿದ್ಧತೆ

ಮಾರ್ಚ್‌ 10ರಂದು ಹೊಸಕೋಟೆ ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಮಯದ ಅಭಾವದಿಂದ ಶಾಸಕ ಶರತ್‌ ಬಚ್ಚೇಗೌಡ ಅಭಿಮಾನಿಗಳನ್ನು ಕರೆ ತರಲು ಸಾಮಾಜಿಕ ಮಾಧ್ಯಮ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಿವರಾತ್ರಿ ನಂತರ ಹೊಸ ಮನ್ವಂತರ ಪ್ರಾರಂಭವಾಗುವ ಭರವಸೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT