ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಯೋಜನೆಗಳ ಕುರಿತು ಅರಿವು ಮೂಡಿಸಿ’

Last Updated 8 ನವೆಂಬರ್ 2019, 17:30 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಕಾನೂನು ಸೇವೆಗಳ ಬೃಹತ್ ಶಿಬಿರವನ್ನು ಜಿಲ್ಲೆಯಲ್ಲಿ ಏರ್ಪಡಿಸಿ ವಿವಿಧ ಇಲಾಖೆಗಳಿಂದ ನೀಡಲಾಗುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು.

ಇಲ್ಲಿನ ಚಪ್ಪರದಕಲ್ಲು ಸರ್ಕಲ್ ಬಳಿ ಇರುವ ಜಿಲ್ಲಾಡಳಿತ ಸಂಕೀರ್ಣದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರಿಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕಾನೂನು ಸೇವೆಗಳ ಬೃಹತ್ ಶಿಬಿರ ಏರ್ಪಡಿಸಲು ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿವಿಧ ಇಲಾಖೆಗಳಿಂದ ಲಭ್ಯವಿರುವ ಸೇವಾ ಸೌಲಭ್ಯದ ಯೋಜನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ಪವರ್‌ ಪಾಯಿಂಟ್ ಪ್ರೆಸೆಂಟೇಷನ್ ಮತ್ತು ಇಲಾಖೆಯ ಆಶಯಗಳನ್ನು ತಿಳಿಸುವ ಕರಪತ್ರಗಳನ್ನು ಮುದ್ರಿಸಿ, ಆಯಾ ಇಲಾಖೆಯ ವತಿಯಿಂದ ಸ್ಟಾಲ್‌ಗಳನ್ನು ನಿರ್ಮಿಸಿ ಜನರಿಗೆ ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಿಬಿರ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ಶೀಘ್ರದಲ್ಲೇ ತಿಳಿಸಲಾಗುವುದು’ ಎಂದರು.

‘ಕಾನೂನು ಸೇವೆಗಳ ಪ್ರಾಧಿಕಾರದ ಬೃಹತ್ ಶಿಬಿರದಲ್ಲಿ ಶಿಕ್ಷಣ, ಕೃಷಿ, ಆರೋಗ್ಯ ಮೊದಲಾದ ಇಲಾಖೆಗಳ ವತಿಯಿಂದ ಇರುವಂತಹ ಕಾರ್ಯಕ್ರಮ ಮತ್ತು ಯೋಜನೆಗಳ ಬಗ್ಗೆ, ಹಿರಿಯರಿಗೆ ಮತ್ತು ನಿರಾಶ್ರಿತರಿಗೆ ಲಭ್ಯವಿರುವ ಪುನರ್ವಸತಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು. ವೃದ್ಧಾ‌ಪ್ಯದಲ್ಲಿ ಮಕ್ಕಳು ಸರಿಯಾಗಿ ನೋಡಿಕೊಳ್ಳದೇ ಇದ್ದಲ್ಲಿ ಕಾನೂನಾತ್ಮಕವಾಗಿ ದಾವೆ (ದೂರು) ಸಲ್ಲಿಸುವುದರ ಬಗ್ಗೆ ಹಾಗೂ ಅಸಂಘಟಿತ ಕಾರ್ಮಿಕರಿಗೆ ಇರುವ ಸೇವಾ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಒತ್ತು ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದರು.

‘ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗಮನ ಹರಿಸಿ, ವಿವಿಧ ಇಲಾಖೆಗಳು ಅರ್ಥಪೂರ್ಣವಾಗಿ ಕಾರ್ಯಕ್ರಮ ರೂಪಿಸಿ, ಶಿಬಿರದ ಉದ್ದೇಶ ಮತ್ತು ಆಶಯಗಳನ್ನು ತಿಳಿಸಲು ಸಿದ್ಧರಾಗಬೇಕು’ ಎಂದರು.

ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ ನಾಯ್ಕ, ಜಿ.ಪಂ. ಉಪ ಕಾರ್ಯದರ್ಶಿ ಕೆ. ಕರಿಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT