ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರು

ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿದ ಹಲವಾರು ಸಾಧನೆಗಳು ನಮಗೆ ಸ್ಫೂರ್ತಿಯಾಗಬೇಕು
Last Updated 11 ಜನವರಿ 2019, 13:15 IST
ಅಕ್ಷರ ಗಾತ್ರ

ಆನೇಕಲ್: ‘ಶ್ರದ್ಧೆ, ಏಕಾಗ್ರತೆ, ಛಲ ಮತ್ತು ಸತತ ಅಭ್ಯಾಸವು ಯಶಸ್ಸಿನ ಕೀಲಿಕೈ ಆಗಿದೆ’ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ತಾಲ್ಲೂಕಿನ ಚಂದಾಪುರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶೇಷ ನೈಪುಣ್ಯ ಕೌಶಲ ತರಬೇತಿ ಶಿಬಿರ ಹಾಗೂ ಪರೀಕ್ಷಾ ಅಧ್ಯಯನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.

‘ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಖಾಸಗಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆ ನಡೆಸಿ ಉತ್ತಮ ಫಲಿತಾಂಶ ಪಡೆಯುವಂತಾಗಲು ಶ್ರಮಿಸಲಾಗುವುದು’ ಎಂದರು.

‘ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಲವಾರು ಮಂದಿ ಉನ್ನತ ಅಧಿಕಾರಿಗಳಾಗಿದ್ದಾರೆ, ರಾಜಕಾರಣಿಗಳಾಗಿದ್ದಾರೆ, ವಿಜ್ಞಾನಿಗಳಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದಾರೆ. ಉತ್ತಮ ಸೌಲಭ್ಯಗಳಿವೆ. ಹಾಗಾಗಿ ಸರ್ಕಾರಿ ಶಾಲೆಗಳ ಬಗೆಗಿನ ಕೀಳರಿಮೆಯನ್ನು ತೊರೆದು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಲು ಮುಂದಾಗಬೇಕು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ರಮೇಶ್ ಮಾತನಾಡಿ, ‘ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಹಕಾರಿಯಾಗಲೆಂದು ಕಾರ್ಯಾಗಾರ ಏರ್ಪಡಿಸಲಾಗಿದ್ದು ಸಂಪನ್ಮೂಲ ವ್ಯಕ್ತಿಗಳಿಂದ ಜೀವನ, ಅಧ್ಯಯನ, ಪರೀಕ್ಷೆ, ಮೆದುಳಿನ ನಿರ್ವಹಣೆ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗಿದೆ. ವಿವಿಧ ಶಾಲೆಗಳ 2,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ’ ಎಂದರು.

‘ಆನೇಕಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಷಯಗಳ ಪುನಚ್ಛೇತನ ತರಬೇತಿ ಕಾರ್ಯಕ್ರಮ, ಶಿಕ್ಷಕರಿಗೆ ವಿಷಯವಾರು ಸಮಾಲೋಚನಾ ಸಭೆ, ಶೇ 50ಕ್ಕಿಂತ ಕಡಿಮೆ ಫಲಿತಾಂಶ ಹೊಂದಿರುವ ಶಾಲೆಗಳಿಗೆ ಸಂಪನ್ಮೂಲ ಶಿಕ್ಷಕರ ತಂಡ ಭೇಟಿ ನೀಡಲಾಗುತ್ತಿದೆ’ ಎಂದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ನಂದೀಶ್.ಬಿ.ಶೆಟ್ಟರ್ ಮಾತನಾಡಿ, ‘ಎಸ್‌ಎಸ್‌ಎಲ್‌ಸಿ ನಂತರ ವಿದ್ಯಾರ್ಥಿಗಳು ತಮ್ಮ ಜೀವನ ಗುಣಮಟ್ಟವನ್ನು ಹೇಗೆ ಬದಲಾಯಿಸಿಕೊಳ್ಳಬೇಕು. ನೆನಪಿನ ಶಕ್ತಿ, ಭಯ ನಿರ್ವಹಣೆ, ಸಮಯ ನಿರ್ವಹಣೆ, ಮನಸ್ಸಿನ ಚಂಚಲ ಮನೋಭಾವ ನಿರ್ವಹಣೆ, ಆತ್ಮವಿಶ್ವಾಸ, ಆಸಕ್ತಿ, ಕ್ರಿಯಾಶೀಲತೆ ಸೇರಿದಂತೆ ಅಧ್ಯಯನದ ತಂತ್ರಗಾರಿಕೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಅಂಕ ಗಳಿಸಬೇಕು’ ಎಂದರು.

ಸೆವೆನ್ ಹೀಲ್ಸ್ ಪಬ್ಲಿಕೇಷನ್‌ನ ಬ್ರೈನ್ ಎಂಬ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಅಧ್ಯಯನ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ನೆರಳೂರು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಜಿ.ನಾಗರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಕೆ. ಗವಿರಂಗಯ್ಯ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಂ. ಮುನಿಯಲ್ಲಪ್ಪ, ಶಿಕ್ಷಣ ಸಂಯೋಜಕ ವಿ.ಪ್ರಕಾಶ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್.ವೀರಭದ್ರಪ್ಪ, ಸಂಪನ್ಮೂಲ ವ್ಯಕ್ತಿ ಸ್ಟಾರ್ ವೆಂಕಟೇಶ್, ಸೆವೆನ್ ಹೀಲ್ಸ್ ಪಬ್ಲಿಕೇಷನ್‌ನ ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT