ಆನೇಕಲ್: ಏಕ್ ಭಾರತ್ ಶ್ರೇಷ್ಠ ಭಾರತ್ ಪರಿಕಲ್ಪನೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಒಂದೇ ಪಕ್ಷದ ಸರ್ಕಾರವಿದ್ದರೆ ಅಭಿವೃದ್ಧಿ ಸುಲಭವಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದರು.
ತಾಲ್ಲೂಕಿನ ಸರ್ಜಾಪುರದಲ್ಲಿ ಬಿಜೆಪಿ ಜಿಲ್ಲಾ ಎಸ್‌ಸಿ ಎಸ್ಟಿ ಮೋರ್ಚಾ ಆಯೋಜಿಸಿದ್ದ ಪರಿವರ್ತನಾ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.
ಗ್ರಾಮಾಭಿವೃದ್ಧಿಯ ದೂರದೃಷ್ಠಿಯೊಂದಿಗೆ ಬಿಜೆಪಿ ಕೆಲಸ ಮಾಡುತ್ತಿದೆ. ಹಾಗಾಗಿ ಮುಂಬರುವ ವಿಧಾನಸಭೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ನೀಡುವ ಮೂಲಕ ಡಬಲ್ ಇಂಜಿನ್ ಸರ್ಕಾರಕ್ಕೆ ಬಲ ನೀಡಬೇಕು. ಈ ಮೂಲಕ ಅಭಿವೃದ್ಧಿಗೆ ದಿಕ್ಸೂಚಿ ಯಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಶ್ವಥನಾರಾಯಣ್, ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್, ಉಪಾಧ್ಯಕ್ಷ ಶಿವಪ್ಪ, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್, ಎಸ್ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ.ಮುನಿರೆಡ್ಡಿ, ಮುನಿರಾಜುಗೌಡ, ಸುರೇಶ್‌ರೆಡ್ಡಿ, ಮುಖಂಡರಾದ ಯಂಗಾರೆಡ್ಡಿ, ಬಿ.ಜಿ.ಆಂಜಿನಪ್ಪ, ಅತ್ತಿಬೆಲೆ ಬಸವರಾಜು, ಕೆ.ಶಿವರಾಮು ಇದ್ದರು.
‘ಗ್ಯಾರಂಟಿ ಕಾರ್ಡ್ ತಿಪ್ಪೆಗೆ ಎಸೆಯಿರಿ’: ಕಾಂಗ್ರೆಸ್ ಪಕ್ಷ ಗ್ಯಾರಂಟಿ ಭರವಸೆ ನೀಡುತ್ತಿದೆ. ಈ ಕಾರ್ಡ್‌ಗಳನ್ನು ತಿಪ್ಪೆಗೆಸಿಯಬೇಕು. ವಾರಂಟಿಯಿಲ್ಲದ ಪಕ್ಷ ಗ್ಯಾರಂಟಿ ನೀಡುತ್ತಿದೆ. ಬಡವರ ಬಗ್ಗೆ ಕನಿಕರವಿಲ್ಲದ ಕಾಂಗ್ರೆಸ್ ಪಕ್ಷ ಘೋಷಣೆಗಳನ್ನು ಮಾಡುತ್ತಿದೆ. ಇದನ್ನು ಜನತೆ ನಂಬದೇ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.