ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್‌ಗೆ ಆನೇಕಲ್‌ನಲ್ಲಿ ಮಿಶ್ರ ಪ್ರತಿಕ್ರಿಯೆ

Last Updated 8 ಜನವರಿ 2019, 12:54 IST
ಅಕ್ಷರ ಗಾತ್ರ

ಆನೇಕಲ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ನೀಡಿದ ಬಂದ್‌ಗೆ ತಾಲ್ಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದಲ್ಲಿ ಮಧ್ಯಾಹ್ನದವರೆಗೂ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಿದ್ದವು. ಕೆಲವು ಖಾಸಗಿ ಬಸ್‌ಗಳು ಸಂಚರಿಸಿದವು. ಐದು ಕೈಗಾರಿಕಾ ಪ್ರದೇಶಗಳನ್ನು ಹೊಂದಿರುವ ತಾಲ್ಲೂಕಿನಲ್ಲಿ ಎಲ್ಲ ಕೈಗಾರಿಕೆಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದರಿಂದ ಕಾರ್ಖಾನೆ ಚಟುವಟಿಕೆ ಸ್ತಬ್ಧಗೊಂಡಿತ್ತು.

ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಉದಾರೀಕರಣ ನೀತಿ ಫಲವಾಗಿ ಕಾರ್ಮಿಕರು, ಕೃಷಿ ಕೂಲಿಕಾರರು, ಅಸಂಘಟಿತ ಕಾರ್ಮಿಕರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಮೋಟಾರ್ ವಾಹನ ತಿದ್ದುಪಡಿ ಮಸೂದೆ ವಾಪಸ್‌ ಪಡೆಯಬೇಕು. ಕಾರ್ಪೋರೇಟ್ ಬಂಡವಾಳ ಪರ ಕಾರ್ಮಿಕ ಕಾನೂನು ತಿದ್ದುಪಡಿ ಮಾಡುವುದನ್ನು ಕೈಬಿಡಬೇಕು. ಹಣದುಬ್ಬರ ತಡೆಗಟ್ಟಿ ಬೆಲೆ ಏರಿಕೆ ನಿಯಂತ್ರಣ ಮಾಡಬೇಕು. ಪಡಿತರ ವ್ಯವಸ್ಥೆ ಸಾರ್ವತ್ರೀಕರಣಗೊಳಿಸಬೇಕು. ಎಲ್ಲಾ ಕಾರ್ಮಿಕರಿಗೂ ₹18ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು. ಗುತ್ತಿಗೆ ಪದ್ಧತಿ ನಿಯಂತ್ರಣ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಕೆಲಸ ಮಾಡುತ್ತಿರುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಂಗನವಾಡಿಗಳನ್ನು ಎನ್‌ಜಿಎಂಗಳಿಗೆ ನೀಡುವುದನ್ನು ನಿಲ್ಲಿಸಬೇಕು. ರೈತರ ಬೆಳೆಗಳಿಗೆ ಕನಿಷ್ಠ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಬಂದ್‌ ಪರಿಣಾಮ ಸದಾ ಗಿಜಿಗುಟ್ಟುತ್ತಿದ್ದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ವಾಹನಗಳ ಸಂಚಾರ ಕಡಿಮೆ ಇತ್ತು. ಅತ್ತಿಬೆಲೆ, ಬೊಮ್ಮಸಂದ್ರ, ವೀರಸಂದ್ರ, ಜಿಗಣಿ, ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕೆಗಳು ಸಂಪೂರ್ಣ ಬಂದ್ ಆಗಿದ್ದವು. ಶಾಲಾ–ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕಾರ್ಮಿಕರು ಬೊಮ್ಮಸಂದ್ರದಲ್ಲಿ ಬೈಕ್ ರ‍್ಯಾಲಿ ನಡೆಸಿ ಬಂದ್‌ಗೆ ಬೆಂಬಲ ಸೂಚಿಸಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಮಹದೇಶ್, ಸಂಘಟನಾ ಕಾರ್ಯದರ್ಶಿ ಪಿ.ಸುರೇಶ್, ಕರ್ನಾಟಕ ಪ್ರಾಂತ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಅಶೋಕ್‌ಕುಮಾರ್, ಕಾರ್ಯದರ್ಶಿ ಕೆ.ಬಾಲರಾಜು, ಮುಖಂಡರಾದ ಬಿ.ಎನ್.ಮಂಜುನಾಥ್, ರಾಮಯ್ಯ, ಇಂದ್ರಾಣಿ, ಪ್ರಮೀಳ, ಉದಯ್‌ಕುಮಾರ್, ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT